ರೈತರ ಸಾಲ ಮನ್ನಕ್ಕೆ ಶೆಟ್ಟರ್ ಆಗ್ರಹ !


20-06-2017 1071

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿವೆ. ಅವರಿಗೆ ಸಾಧ್ಯವಾಗುವ ಸಾಲ ಮನ್ನಾ ನಮ್ಮಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ವಿಧಾನ ಸೌಧದಲ್ಲಿ ಇಂದು ಮಾತನಾಡಿದ ಅವರು ಈ ಕೂಡಲೆ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತವಿರುವ ಪಂಜಾಬ್‍ ನಲ್ಲೂ ಕೂಡ ರೈತರ ಸಾಲ ಮನ್ನಾ ಮಾಡಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ. ಇತರ ರಾಜ್ಯಗಳು ಸೇರಿದಂತೆ, ವಿಶೇಷವಾಗಿ ಕಾಂಗ್ರಸ್ ಆಡಳಿತದ ಇರುವ ಪಂಜಾಬ್ ಸರ್ಕಾರದ ಮಾದರಿಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರೈತರ ಸಾಲ ಮನ್ನಾ ಮಾಡಲಿ. ನಿರಂತರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಶೆಟ್ಟರ್ ಹೇಳಿದರು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ನಿರಂತರವಾಗಿ ಬರಗಾಲ ತಾಂಡವವಾಡುತ್ತಿದೆ. ಮಳೆ ಬಾರದೆ ನೂರಾರು ರೈತರು ಬೆಳೆ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಜೀವನಕ್ಕಾಗಿ ಪರ ರಾಜ್ಯಗಳಿಗೆ ಗುಳೇ ಹೋಗುತ್ತಿದ್ದಾರೆ. ಮೇವು -ನೀರು ಇಲ್ಲದೆ ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ದುಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡಿ ಅವರು ಬದುಕಲು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಸರ್ಕಾರಕ್ಕೆ ಒತ್ತಾಯ ಮಾಡುತ್ತಲೇ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗ್ಯಗಳನ್ನು ಘೋಷಣೆ ಮಾಡುತ್ತ ರೈತರ ಯೋಗಕ್ಷೇಮವನ್ನು ಮರೆತಿದ್ದಾರೆ ಎಂದು ಟೀಕಿಸಿದರು.


ಒಂದು ಕಮೆಂಟನ್ನು ಬಿಡಿ