ಷಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ


30-03-2018 314

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಅವರು ಯಾವ ಕಾರಣಕ್ಕೂ ಕರ್ನಾಟಕಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮೈಸೂರಿನಲ್ಲಿ ಆರ್ಎಸ್‍ಎಸ್ ಕಾರ್ಯಕರ್ತ ರಾಜು ಎಂಬುವವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಅಮಿತ್ ಷಾ ಅವರು ಐದು ಲಕ್ಷ ರೂಪಾಯಿ ನೀಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹೇಳಿದರು.

ಅಮಿತ್ ಷಾ ಅವರು ತಮ್ಮ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ನೀಡಿದ್ದಾರೆ ಎಂದು ಮೃತರ ತಾಯಿ ಹೇಳಿಕೊಂಡಿದ್ದಾರೆ. ಇವರು ಮಾತ್ರ, ನಾವು ಹಣ ಕೊಟ್ಟಿಲ್ಲ. ಭರವಸೆ ಮಾತ್ರ ಕೊಟ್ಟಿದ್ದೇವೆ ಎನ್ನುತ್ತಿದ್ದಾರೆ. ಇದು ಸರಿ ಅಲ್ಲ. ಅಮಿತ್ ಷಾ ಅವರ ಕ್ರಮ ಸಹಜವಾಗಿಯೇ ಮತದಾರರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಯಾವ ಕಾರಣಕ್ಕೂ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಚುನಾವಣಾ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ಈ ಬೆಳವಣಿಗೆ ನಡೆದಾಗ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್ ಸಿಂಹ ಅವರೂ ಇದ್ದರು. ಹೀಗಾಗಿ ಇದರಲ್ಲಿ ಅವರೂ ಭಾಗಿ ಎಂದು ಅವರು ಆರೋಪಿಸಿದರು. ಬಿಜೆಪಿಯವರಿಗೆ ಕರ್ನಾಟಕದಲ್ಲಿ ಗೆಲ್ಲುವ ಯಾವ ಭರವಸೆಯೂ ಇಲ್ಲ. ಹೀಗಾಗಿ ಇಂತಹ ಗಿಮಿಕ್ಕುಗಳಿಂದ, ಕಾನೂನು ಸುವ್ಯವಸ್ಥೆಗೆ ಭಂಗ ತರುವುದರಿಂದ ಲಾಭ ಮಾಡಿಕೊಳ್ಳಬಹುದು ಎಂದು ಭಾವಿಸಿದ್ದಾರೆ. ಇದರ ಭಾಗವಾಗಿಯೇ ಆರ್.ಎಸ್.ಎಸ್.ಕಾರ್ಯಕರ್ತ ರಾಜು ಅವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ನೀಡಲಾಗಿದೆ. ಚುನಾವಣಾ ಆಯೋಗ ತಕ್ಷಣವೇ ಇದನ್ನು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಬೇಕು. ಹೀಗಾಗಿ ಯಾವ ಕಾರಣಕ್ಕೂ ಅವರು ಕರ್ನಾಟಕಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. ಬಿಜೆಪಿಯವರು ಏನೇ ಪ್ರಯತ್ನ ಪಟ್ಟರೂ ರಾಜ್ಯದಲ್ಲಿ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಯಾಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಜನಪರ ಧೋರಣೆಗಳನ್ನು ರಾಜ್ಯದ ಜನ ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

dinesh gundu rao Kpcc ನೀತಿ ಸಂಹಿತೆ ಅಮಿತ್ ಷಾ