ರಸ್ತೆ ತಡೆ ನಡೆಸಿ ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ


13-08-2018 451

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಲ್ಲದೆ ವಿದ್ಯಾರ್ಥಿಗಳು ಪ್ರತಿ ದಿನ ಪರದಾಡುತ್ತಿದ್ದು, ಕೊನೆಗೆ ಸಾರಿಗೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿ ದಿನ ಶಾಲಾ-ಕಾಲೇಜಿಗೆ ಹೊರಡುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿಲ್ಲದೆ ಪರದಾಡಬೇಕಾಗಿದೆ‌. ಇದರಿಂದ ಕಾಲೇಜು, ಶಾಲೆಗೆ ತಡವಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿಗಳು ಕೊನೆಗೆ ವಿಧಿ ಇಲ್ಲದೆ ರಸ್ತೆ ತಡೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕನ ಮಾಡಿದ ಪೊಲೀಸರು ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ಸಧ್ಯಕ್ಕೆ ತಿಳಿಗೊಳಿಸಿದ್ದಾರೆ. ಆದರೆ, ಪ್ರತಿದಿನ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾರಿಗೆ ಸಚಿವ ಡಿ.ಸಿ‌.ತಮ್ಮಣ್ಣ ತಮ್ಮದೇ ಜಿಲ್ಲೆಯವರಾಗಿದ್ದಾರೆ‌. ಆದರೂ, ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದ್ದಾರೆ. ಇನ್ನಾದರೂ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

KSRTC Students ಪರಿಸ್ಥಿತಿ ಶಾಲಾ-ಕಾಲೇಜು