‘ಆರೋಪಗಳ ವಿಷ ಕುಡಿದು ವಿಷಕಂಠನಾಗಿದ್ದೇನೆ’


25-07-2019 120

ಬೆಂಗಳೂರು:ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನಮುಂದೆ ಬಂದು ಹೇಳಲಿ, ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಸಂಬಂಧ ಮೂರು ಟ್ವೀಟ್‍ಗಳನ್ನು ಕನ್ನಡ ಮತ್ತು ಇಂಗ್ಲಿಷ್‍ನಲ್ಲಿ ಮಾಡಿರುವ ಅವರು, ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳು ಮತ್ತು ವರದಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಇನ್ನೊಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.

ಜೊತೆಗೆ, ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹಸುಳ್ಳು ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು.ಸತ್ಯಮೇವ ಜಯತೇ! ಎಂದು ಅವರು ಮತ್ತೊಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Siddaramaiah Congress Rebel MLA Karnataka Government