ಸೆ. 12 ರಂದು ಕಾಂಗ್ರೆಸ್ ನಿಂದ ರಾಜ್ಯಾದ್ಯಂತ ಧರಣಿ

Congress Protest

11-09-2019

ಬೆಂಗಳೂರು : ರಾಜ್ಯದ ನೆರೆ ಮತ್ತು ಬರ ಸಮಸ್ಯೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಸೆ. 12 ರಂದು ರಾಜ್ಯಾದ್ಯಂತ ಧರಣಿ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ವಿಶೇಷ ಆದೇಶ ಹೊರಡಿಸಲಾಗಿದೆ. ಅಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಹೋರಾಟ ನಡೆಸುವಂತೆ ಕರೆ ಕೊಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿತನದಿಂದಾಗಿರಾಜ್ಯದ ಬರ- ನೆರೆ ಸಮಸ್ಯೆಗೆಸಿಗಬೇಕಾದ ಅನುದಾನ ಸಿಗುತ್ತಿಲ್ಲ. ಇದರಿಂದಾಗಿ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವ ಸಂಪುಟದ ಹಲವು ಸದಸ್ಯರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆದರೆ ಇದುವರೆಗೂ ಬಿಡಿಗಾಸು ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ದುರಂತ ಎಂದು ಘೋಷಿಸಿಲ್ಲ. ಹಣಕಾಸು ಪರಿಹಾರ ಒದಗಿಸದೇ ತಾರತಮ್ಯ ತೋರಿಸುತ್ತಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ರಾಜ್ಯದ ಜನರ ಸಂಕಷ್ಟ ಕೇಂದ್ರ ಮಟ್ಟದಲ್ಲಿ ಗಮನ ಸೆಳೆಯುವಂತಹ ಕಾರ್ಯ ಮಾಡಬೇಕಾಗಿದೆ. ಜನ - ಜಾನುವಾರುಗಳ ಸಾವು ದೊಡ್ಡ ಮಟ್ಟದಲ್ಲಿ ಸಂಭವಿಸಿದೆ. ಜೊತೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಮನೆ-ಮಠಗಳು ಕುಸಿದಿವೆ. ಹೊಲ, ಗದ್ದೆಗಳಿಗೆ ನೀರು ನುಗ್ಗಿ ಬೆಳೆದ ಬೆಳೆ ನಷ್ಟವಾಗಿದೆ. ಇಷ್ಟೊಂದು ದೊಡ್ಡ ಮಟ್ಟದ ಸಮಸ್ಯೆಯಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಹಕಾರಕ್ಕೆ ಮುಂದಾಗಿಲ್ಲ. ಈ ಧೋರಣೆ ಖಂಡಿಸಿ ಈಗಾಗಲೇ ಹಲವು ಹೋರಾಟಗಳನ್ನು ನಡೆಸುತ್ತಿದ್ದು, ಈ ಧರಣಿ ಸತ್ಯಾಗ್ರಹದ ಮೂಲಕ ಇನ್ನೊಮ್ಮೆ ಸರ್ಕಾರಗಳ ಕಣ್ಣು ತೆರೆಸುವ ಪ್ರಯತ್ನ ಮಾಡಬೇಕಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Congress Protest Flood Drought


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ