ಶಾಶ್ವತ ನೀರಾವರಿಗೆ ಆಗ್ರಹಿಸಿ ಪ್ರತಿಭಟನೆ !

Kannada News

19-06-2017

ಬೆಂಗಳೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಸೋಮವಾರ ಧರಣಿ ಸತ್ಯಾಗ್ರಹ ನಡೆಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಆರ್‍ಪಿಐ) ಕಾರ್ಯಕರ್ತರು  ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು. ಪುರಭವನದ ಮುಂಭಾಗದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು ರೈತರ ಸಾಲ ಮನ್ನಾ ಮಾಡಿ ಕೋಲಾರ, ಚಿಕ್ಕಬಳ್ಳಾಪುರ ಇನ್ನಿತರ ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಎಲ್ಲಾ ಬಗೆಯ ಸಾಲವನ್ನು ಮನ್ನಾ ಮಾಡಬೇಕೆಂದು ಧರಣಿಯ ನೇತೃತ್ವ ವಹಿಸಿದ್ದ ಪಕ್ಷದ ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಅವರ ಆಗ್ರಹಿಸಿದರು. ಸಾಲದ ಸುಳಿಗೆ ಸಿಲುಕಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸಂಕಷ್ಟದಲ್ಲಿರುವ ರೈತನ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಒತ್ತಾಯಿಸಿದರು. ಕೋಲಾರ, ಚಿಕ್ಕಬಳ್ಳಾಪುರ ಇನ್ನಿತರ ಬಯಲುಸೀಮೆ ಪ್ರದೇಶಗಳ ಜನರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ಕೂಡಲೇ ಇಲ್ಲಿಯ ಜನರಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ