ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ !

Kannada News

29-06-2017

ಬೆಂಗಳೂರು: ಭೀಕರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾದ ಹಿಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 795 ಕೋಟಿ ರಾಜ್ಯಕ್ಕೆ ಮಂಜೂರು ಮಾಡಿದೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕೃಷಿ ಸಚಿವ ಕೃಷ್ಣಬೈರೇಗೌಡ ಅವರಿಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿಕೊಂಡ ಮನವಿಗೆ ಸ್ಪಂದಿಸಿ ಈ ಮೊತ್ತವನ್ನು ಬಿಡುಗಡೆ ಮಾಡಲು ಅವರು ಒಪ್ಪಿದ್ದಾರೆ. ಬೆಳೆ ನಷ್ಟ ಪರಿಹಾರವನ್ನು ರೈತರ ಖಾತೆಗಳಿಗೆ ಇನ್‌ಪುಟ್ ಸಬ್ಸಿಡಿಯಲ್ಲಿ ನೀಡಲು ರಾಜ್ಯ ಸರ್ಕಾರ ಮುಂದಾಗಲಿದೆ. ಬರ ಪರಿಹಾರ ಮಂಜೂರು ಮಾಡುವ ಕುರಿತು ರಾಜನಾಥ್‌ಸಿಂಗ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಆ ಹಿನ್ನೆಲೆಯಲ್ಲಿ ರಾಜ್ಯದ ಸಚಿವರು ಅವರನ್ನು ಭೇಟಿಯಾಗಿದ್ದರು. ಇಬ್ಬರೂ ಸಚಿವರು ನಿನ್ನೆಯೇ ದೆಹಲಿ ತಲುಪಿದ್ದು, ಇಂದು ಬೆಳಗ್ಗೆ ರಾಜನಾಥ್‌ಸಿಂಗ್ ಅವರನ್ನು, ಅವರ ನಿವಾಸದಲ್ಲಿ ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಉಪಸ್ಥಿತರಿದ್ದರು. ಹಿಂಗಾರು ಹಂಗಾಮಿನಲ್ಲಿ 169 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ತಾಲ್ಲೂಕುಗಳಲ್ಲಿ 13.7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 7097.89 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಲಾಗಿತ್ತು. ಈ ಪೈಕಿ ಕೇಂದ್ರದ ನಿಯಮಾವಳಿಗಳ ಪ್ರಕಾರ ರಾಜ್ಯಕ್ಕೆ 3310.80 ಕೋಟಿ ರೂ. ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಕೃಷ್ಣಬೈರೇಗೌಡ ಮತ್ತು ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಬಂದು ತಿಂಗಳುಗಳೂ ಕಳೆದರೂ ಹಿಂಗಾರು ಬೆಳೆ ನಷ್ಟ ಕುರಿತಂತೆ ಕೇಂದ್ರದಿಂದ ಯಾವುದೇ ರೀತಿಯ ಅನುದಾನ ಬಿಡುಗಡೆಯಾಗಿರಲಿಲ್ಲ. ಈ ವಿಚಾರವನ್ನು ಕಾಗೋಡು ತಿಮ್ಮಪ್ಪ ಅವರು ಪದೇ ಪದೇ ಪ್ರಸ್ತಾಪ ಮಾಡಿದ್ದರು. ಕೇಂದ್ರದ ನೆರವು ಕೋರಿ ಮತ್ತೊಮ್ಮೆ ಕೇಂದ್ರ ಸಚಿವರನ್ನು ಭೇಟಿ ಮಾಡುವುದಾಗಿ ಹೇಳಿದ್ದರ ಹಿನ್ನೆಲೆಯಲ್ಲಿ ಇಬ್ಬರೂ ಸಚಿವರು ದೆಹಲಿಗೆ ಭೇಟಿ ನೀಡಿದ್ದರು. ರಾಜ್ಯ ಸರ್ಕಾರ ಕೇಳಿದ್ದ ಮೊತ್ತ 3310.83 ಕೋಟಿ ರೂ. ಪೈಕಿ 795 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ಸಮ್ಮತಿಸಿದೆ. ಮುಂಗಾರು ಹಂಗಾಮಿನಲ್ಲಿ 17,193 ಕೋಟಿ ರೂ. ಮೊತ್ತದ ಬೆಳೆ ನಷ್ಟ ಉಂಟಾಗಿದ್ದು, ಈ ಪೈಕಿ ಕೇಂದ್ರದ ನಿಯಾವಳಿಗಳ ಪ್ರಕಾರ 7402.54 ಕೋಟಿ ರೂ. ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೇಳಿತ್ತು. ಈ ಪೈಕಿ ಕೇವಲ 1685 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಈ ಹಣವನ್ನು ರಾಜ್ಯ ಸರ್ಕಾರ ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ಇನ್‌ಪುಟ್ ಸಬ್ಸಿಡಿ ರೂಪದಲ್ಲಿ ಬಿಡುಗಡೆ ಮಾಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ