ವಿಶ್ವನಾಥ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ !

Kannada News

07-07-2017

ಮೈಸೂರು: ಇಂದು ಆಷಾಡ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದೂ, ಮುಂಜಾನೆಯಿಂದಲೇ ಚಾಮುಂಡೇಶ್ವರಿ ದೇವಿಗೆ  ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಇದನ್ನು ಕಣ್ಣು ತುಂಬಿಕೊಳ್ಳಲು ಮತ್ತು ಶಕ್ತಿ ದೇವತೆಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಇಲ್ಲಿ ನೂಕುನುಗ್ಗಲು ಉಂಟಾಗದಂತೆ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ದಂಪತಿ ಭೇಟಿ ನೀಡಿದ್ದಾರೆ. ಚಾಮುಂಡಿ ಬೆಟ್ಟದದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಪೂಜೆಯ ನಂತರ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ. ಜೆಡಿಎಸ್ ಪಕ್ಷಕ್ಕೆ ಸಂಬಂಧಿಸಿದಂತೆ ತಮ್ಮ ಪುತ್ರ ಪ್ರಜ್ಚಲ್ ನೀಡಿರುವ ಹೇಳಿಕೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. ಜೆಡಿಎಸ್ ನಲ್ಲಿ ಎಚ್.ಡಿ ದೇವೇಗೌಡರು ಹೇಳುವ ಮಾತೇ ಅಂತಿಮ, ಅವರ ಮಾತನ್ನು ಯಾರೂ ಮೀರುವಂತಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಲ್ಲದೇ ಜೆಡಿಎಸ್ ನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ, ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಇದೇ ವೇಳೆ ಎಚ್.ಡಿ ರೇವಣ್ಣ ಹೇಳಿದ್ದಾರೆ. ಇನ್ನು ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್ ಸೇರ್ಪಡೆಯಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ , ವಿಶ್ವನಾಥ್ ಹಿರಿಯ ರಾಜಕೀಯ ನಾಯಕರು, ಅವರ ಸೇರ್ಪಡೆಯಿಂದ ಜೆಡಿಎಸ್ ಗೆ ಮತ್ತಷ್ಟು ಬಲ ಬಂದಿದೆ ಎಂದರು. ಆಷಾಡ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದೇವೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಜನರ ಸಂಕಷ್ಟಗಳು ದೂರವಾಗಲಿ ಎಂದು ಚಾಮುಂಡೇಶ್ವರಿಯನ್ನು ಬೇಡಿಕೊಂಡಿದ್ದೇನೆ ಎಂದರು.                       



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ