“ಆರೋಗ್ಯ ನಗರ” ಕ್ಕೆ ಶಂಕುಸ್ಥಾಪನೆ !

Kannada News

12-07-2017 289

ಬೆಂಗಳೂರು: ರಾಮನಗರದ ಅರ್ಚಕರಹಳ್ಳಿಯಲ್ಲಿ “ಆರೋಗ್ಯ ನಗರ” ನಿರ್ಮಾಣಕ್ಕೆ ಆಗಸ್ಟ್ ಮೊದಲ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜೀವ್‍ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡುವ ಸಂಬಂಧ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ, ಹಣಕಾಸು, ವೈದ್ಯ ಶಿಕ್ಷಣ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆರೋಗ್ಯ ನಗರದಲ್ಲಿ ರಾಜೀವ್‍ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಟ್ಟಡಗಳು ತಲೆ ಎತ್ತಲಿವೆ. ಶಂಕುಸ್ಥಾಪನೆ ಕಾರ್ಯಕ್ರಮ ಮುಗಿದ ಕೂಡಲೇ ಕಾಮಗಾರಿಗೆ ಚಾಲನೆ ಸಿಗಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಕಟ್ಟಡಗಳ ನಿರ್ಮಾಣಕ್ಕೆ ಗುರುತಿಸಿರುವ ಪ್ರದೇಶದಲ್ಲಿರುವ ಕೆಲ ಜಮೀನುಗಳ ಮಾಲೀಕರು ಪರಿಹಾರದ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ವಿವಾದ ರಹಿತ ಜಾಗದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಮುಂದಾಗಲಿದೆ.  ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಿ. ಈ ಸಂಬಂಧ ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತುಕತೆ ನಡೆಸಿ ಎಂದು ಮುಖ್ಯಮಂತ್ರಿಯವರು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಆದೇಶಿಸಿದರು.

ಕಟ್ಟಡಗಳ ನಿರ್ಮಾಣಕ್ಕೆ ನಿಗಧಿ ಮಾಡಿರುವ ಅನುದಾನವನ್ನು ತಕ್ಷಣ ಲೋಕೋಪಯೋಗಿ ಇಲಾಖೆಗೆ ವರ್ಗಾಯಿಸುವಂತೆಯೂ ತಿಳಿಸಿದರು. ಒಟ್ಟು 16 ಕಟ್ಟಡಗಳು ಆರೋಗ್ಯ ನಗರದಲ್ಲಿ ನಿರ್ಮಾಣವಾಗಲಿದೆ. ಈ ಪೈಕಿ 10 ಕಟ್ಟಡಗಳನ್ನು ವಿವಾದ ರಹಿತ ಪ್ರದೇಶದಲ್ಲಿ ನಿರ್ಮಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಒಂದು ಮೆಡಿಕಲ್ ಕಾಲೇಜು ಸಹಿತ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ದಂತ ವೈದ್ಯ, ನರ್ಸಿಂಗ್, ಫಾರ್ಮಸಿ ಕಾಲೇಜು ಆರೋಗ್ಯ ನಗರದಲ್ಲಿ ನಿರ್ಮಾಣವಾಗಲಿದೆ. ಜೊತೆಗೆ ವಿದ್ಯಾರ್ಥಿ ನಿಲಯ, ಸಿಬ್ಬಂದಿಗೆ ವಸತಿ ಗೃಹಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು. ಆರೋಗ್ಯ ನಗರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಯವರು ಹೇಳಿದರು. ಇಂಧನ ಸಚಿವರೂ ಆಗಿರುವ ರಾಮನಗರ ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ಜಿಲ್ಲಾಧಿಕಾರಿ ಡಾ. ಮಮತಾ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ