ಪ್ರತ್ಯೇಕ ಧ್ವಜ: ಚುನಾವಣಾ ಗಿಮಿಕ್..?

Kannada News

21-07-2017

ಮೈಸೂರು: ರಾಜ್ಯದಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು, ಮೈಸೂರಿನಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ರಾಜ್ಯದ ಮುಖ್ಯಮಂತ್ರಿಯಾದವರಿಗೆ ಗೃಹ ಸಚಿವರನ್ನೂ ಮೀರಿ ಗುಪ್ತಚರ ಮಾಹಿತಿ ಪಡೆಯಲು ಅವಕಾಶವಿದೆ. ಆದರೆ ಅದ್ಯಾವುದನ್ನೂ ಸಿದ್ದರಾಮಯ್ಯ ಅವರು ಮಾಡಲಿಲ್ಲ ಎಂದು ಆರೋಪಿಸಿದರು. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಶಿಕಲಾ ಐಷಾರಾಮಿ ಜೀವನ ಮಾಡುವಾಗ ಗುಪ್ತಚಾರ ಇಲಾಖೆ ಏನು ಮಾಡುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ. ಗೃಹ ಖಾತೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಸಾರ ಮನೋಭಾವನೆ ಹೊಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣರಾಗಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. ಇನ್ನು ರಾಜ್ಯಕ್ಕೆ ಪ್ರತ್ಯೇಕ ಧ್ವಜ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಸಮಿತಿ ರಚಿಸಿರುವ, ರಾಜ್ಯ ಸರ್ಕಾರದ ನಿಲುವು ಸರಿಯಲ್ಲ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಈ ವಿವಾದ ಹುಟ್ಟು ಹಾಕಿದ್ದಾರೆ ಎಂದರು. ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಬಹುದೇ ಹೊರತು ಪ್ರತ್ಯೇಕ ಧ್ವಜಕ್ಕಾಗಿ ಬೇಡಿಕೆ ಇಡಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂದರು. ಈಗ ಪ್ರತ್ಯೇಕ ಧ್ವಜದ ಬೇಡಿಕೆ ಇಟ್ಟಿರುವುದು ಕೇವಲ ಚುನಾವಣಾ ಗಿಮಿಕ್ ಆಗಿದೆ ಎಂದಿದ್ದಾರೆ. ಸಿದ್ದರಾಮಯ್ಯ ಈಗ ಕನ್ನಡ ಕಾವಲು ಸಮಿತಿ ಅಧ್ಯಕ್ಷರಲ್ಲ, ಓರ್ವ ಮುಖ್ಯಮಂತ್ರಿ ಆಗಿ ಈ ರೀತಿ ನಡೆದುಕೊಳ್ಳಬಾರದು ಎಂದು ಹರಿಹಾಯ್ದರು.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ