ತಲೆ ಎತ್ತಲಿವೆ 900 ಮದ್ಯದಂಗಡಿಗಳು !

Kannada News

24-07-2017

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಬಂದ್ ಮಾಡಿರುವುದರಿಂದ ರಾಜ್ಯ ಸರ್ಕಾರದ ಆದಾಯಕ್ಕೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಹೊಸದಾಗಿ 900 ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 30 ಹಾಗೂ ಇತರೆ ಭಾಗಗಳಲ್ಲಿ 870 ಸೇರಿದಂತೆ ಒಟ್ಟು 900 ನೂತನ ಮದ್ಯದ ಅಂಗಡಿಗಳು ಮುಂದಿನ ಆಗಸ್ಟ್ ಮಧ್ಯಭಾಗದಲ್ಲಿ ತೆರೆಯಲಿವೆ. ಎಂಎಸ್‍ಐಎಲ್ ಮೂಲಕ ಬಾರ್ ಅಂಗಡಿಗಳು ಆರಂಭವಾಗಲಿದ್ದು, ಸುಪ್ರೀಂಕೋರ್ಟ್ ನಿರ್ದೇಶನವನ್ನು ಪಾಲನೆಯಲ್ಲಿಟ್ಟುಕೊಂಡು ಕಾನೂನಿಗೆ ತೊಡಕಾಗದಂತೆ ತೆರೆಯಲು ಸರ್ಕಾರ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಹೊಸ ಮದ್ಯದಂಗಡಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ನಿರ್ದೇಶನ ಬಂದಿದೆ. ಈಗಾಗಲೇ ನಾವು ಪ್ರಕ್ರಿಯೆಗಳನ್ನು ಆರಂಭಿಸಿದ್ದೇವೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಖಚಿತ ಪಡಿಸಿದ್ದಾರೆ. ಈ ಹಿಂದೆ ಸರ್ಕಾರ ರಾಜ್ಯದ ವಿವಿಧೆಡೆ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಎಂಎಸ್‍ಐಎಲ್ ಮೂಲಕ ತೆರೆಯಲು ಮುಂದಾಗಿತ್ತು. ಆದರೆ, ಇದಕ್ಕೆ ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಪ್ರಸ್ತಾವನೆಯನ್ನು ಕೈ ಬಿಡಲಾಗಿತ್ತು.

ಒಂದೆಡೆ ಬಿಹಾರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮದ್ಯಪಾನವನ್ನೇ ಅಲ್ಲಿನ ಸರ್ಕಾರಗಳು ನಿಷೇಧಿಸಿರುವಾಗ ಸರ್ಕಾರ ಯಾವ ಉದ್ದೇಶಕ್ಕಾಗಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುತ್ತಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು. ಇನ್ನೊಂದೆಡೆ ಸಾರ್ವಜನಿಕರಿಂದಲೂ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಸರ್ಕಾರ ತಾತ್ಕಾಲಿಕವಾಗಿ ಈ ಪ್ರಸ್ತಾವನೆಯನ್ನು ಕೈ ಬಿಟ್ಟಿತ್ತು. ಆದರೆ ಇದೀಗ ಬರೋಬ್ಬರಿ 900 ಮದ್ಯದಂಗಡಿಗಳನ್ನು ತೆರೆಯಲು ಮುಂದಾಗಿದ್ದೂ, ಇದರಿಂದ ಮುಂದೆ ಯಾವರೀತಿ ಪರಿಣಾಮ ಎದುರಿಸಲಿದೆ ಎಂದು ಕಾದು ನೋಡಬೇಕಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ