ಹೆಚ್ಚುವರಿ ಪದಾಧಿಕಾರಿಗಳ ಆಯ್ಕೆಗೆ ಗ್ರೀನ್ ಸಿಗ್ನಲ್ !

Kannada News

08-08-2017

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ನೂರು ಪದಾಧಿಕಾರಿಗಳನ್ನು ಹೆಚ್ಚುವರಿಯಾಗಿ ನೇಮಕ ಮಾಡಲು ಹೈಕಮಾಂಡ್ ತೀರ್ಮಾನಿಸಿರುವುದು ಆಕಾಂಕ್ಷಿಗಳ ಹುಮ್ಮಸ್ಸು ಹೆಚ್ಚಿಸಿದೆ. ಉಪಾಧ್ಯಕ್ಷರು, ಪ್ರಧಾನಕಾರ್ಯದರ್ಶಿ, ಕಾರ್ಯದರ್ಶಿ ಸೇರಿದಂತೆ ಪಕ್ಷದ ಹಲವು ಹುದ್ದೆಗಳನ್ನು ನೀಡಿ 170 ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಇದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು.  ಬೆಂಗಳೂರು ಕೇಂದ್ರೀಕೃತವಾಗಿ 100 ಹುದ್ದೆಗಳನ್ನು ನೀಡಲಾಗಿದ್ದು, ಕೇವಲ 70 ಹುದ್ದೆಗಳನ್ನು 30 ಜಿಲ್ಲೆಗಳಿಗೆ ನೀಡಲಾಗಿದ್ದು, ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟು ಮಾಡಿತ್ತಲ್ಲದೆ, ನಾಯಕರ ಹಿಂಬಾಲಕರಿಗೆ ಮತ್ತು ನಿಗಮ ಮಂಡಳಿಗಳಲ್ಲಿ ಅಧ್ಯಕ್ಷರಾದವರಿಗೆ, ಮಾಜಿ ಶಾಸಕರಿಗೆ, ಹಾಲಿ ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಪಕ್ಷದ ಪದಾಧಿಕಾರಿಗಳ ಹುದ್ದೆ ನೀಡಲಾಗಿತ್ತು. ಇದು ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಅತೃಪ್ತಿ, ಅಸಮಾಧಾನ, ಭಿನ್ನಾಭಿಪ್ರಾಯ ಒಳಗೊಳಗೇ ಕುದಿಯುತ್ತಿದ್ದು, ಪಕ್ಷ ಮುನ್ನಡೆಸಲು ಅಡ್ಡಿಯಾಗುತ್ತಿದೆ. ಹಾಗಾಗಿ ಹೆಚ್ಚುವರಿಯಾಗಿ ಪದಾಧಿಕಾರಿಗಳನ್ನು ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಮತ್ತೊಂದು ಪಟ್ಟಿ ಸಿದ್ಧವಾಗುತ್ತಿದೆ ಎಂದು ಹೇಳಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ