ರಾಜ್ಯದ ವಿವಿಧೆಡೆ ಉತ್ತಮ ಮಳೆ !

Kannada News

10-08-2017

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ವಿವಿಧೆಡಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಮಳೆ ಚೇತರಿಕೆ ಕಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರೈತರು ನಿಟ್ಟಿಸಿರು ಬಿಡುವಂತಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ 110 ಮಿ.ಮೀಟರ್‍ ವರೆಗೂ ಮಳೆಯಾಗಿದೆ.

ಅದೇ ರೀತಿ ಕೊಪ್ಪಳ, ರಾಯಚೂರು, ಹೈದರಾಬಾದ್-ಕರ್ನಾಟಕ, ಬೆಳಗಾವಿ ಸೇರಿದಂತೆ ವಿವಿಧೆಡೆ ರಾಜ್ಯದ ಶೇಕಡ ಮುಕ್ಕಾಲು ಭಾಗದಷ್ಟು ಮಳೆಯಾಗಿದೆ. ಆದರೂ ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಒಂದು ವಾರದ ಕಾಲ ಇದೇ ರೀತಿ ಚದುರಿದಂತೆ ಅಲ್ಲಲ್ಲಿ ಮಳೆ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೂ ಪದೇ ಪದೇ ಹಗುರ ಮಳೆ ಬರುತ್ತಿತ್ತು. ರಾತ್ರಿಯಾಗುತ್ತಿದ್ದಂತೆ ಹಲವು ಬಡಾವಣೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಇಡೀ ರಾತ್ರಿ ಮಳೆ ಬಿದ್ದ ವರದಿಯಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Nice
  • SHEKHAR PATIL
  • Army