ನಾಳೆ ಕಾಂಗ್ರೆಸ್ ಶಕ್ತಿ ಪ್ರದರ್ಶನ !

Kannada News

11-08-2017

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಲೇ ಭರ್ಜರಿ ತಯಾರಿ ನಡೆದಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‍ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶನದ ಮೂಲಕ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ.

ಯುಪಿಎ ಸರ್ಕಾರವಿದ್ದಾಗ ಜಾರಿಗೊಳಿಸಿದ 371(ಜೆ) ಕಾಯಿದೆಯ ಸೌಲಭ್ಯಗಳು, ರೂಪುರೇಷೆ, ಕಾಯ್ದೆಯಿಂದ ಈ ಭಾಗದ ಜನರಿಗೆ ಆಗುವ ಪ್ರಯೋಜನ, ಮುಂತಾದವುಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ರಾಹುಲ್‍ ಗಾಂಧಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕೆ ಭರದ ಸಿದ್ದತೆ ನಡೆಯುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‍ ಸೇಠ್ ಅವರು ಸಿದ್ಧತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹೈದರಾಬಾದ್ ಭಾಗಕ್ಕೆ ಶಿಕ್ಷಣ, ಉದ್ಯೋಗ, ಅಭಿವೃದ್ಧಿ ದೃಷ್ಟಿಯಿಂದ 371(ಜೆ) ಕಲಂ ಜಾರಿಗೊಳಿಸುವಲ್ಲಿ ರಾಹುಲ್‍ ಗಾಂಧಿಯವರು ಹೆಚ್ಚಿನ ಶ್ರಮ ವಹಿಸಿದ್ದು, ಈ ಉದ್ದೇಶದಿಂದ ಆಯೋಜಿಸಿರುವ ಈ ಸಮಾವೇಶದಲ್ಲಿ ವಿಶೇಷವಾಗಿ ರಾಹುಲ್ ಗಾಂಧಿಯವರು ಮಾತನಾಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಮುಖಂಡರಾದ ಆಸ್ಕರ್ ಫರ್ನಾಂಡೀಸ್, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ, ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿಗಳು ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.

371 (ಜೆ) ಕಲಂ ಜಾರಿಗೆ ಶ್ರಮಿಸಿದ ರಾಹುಲ್ ಗಾಂಧಿಯವರಿಗೆ ಈ ಸಂದರ್ಭದಲ್ಲಿ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ. ನಂತರ ರಾಹುಲ್ ಗಾಂಧಿಯವರು ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದು, ದೆಹಲಿಗೆ ಹಿಂತಿರುಗಲಿದ್ದಾರೆ.  ಇದೇ 16ರಂದು ಬೆಂಗಳೂರಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮತ್ತೆ ಆಗಮಿಸಲಿದ್ದಾರೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ