ಪತ್ರಕರ್ತೆ ಹತ್ಯೆ ದೇಶವ್ಯಾಪಿ ಖಂಡನೆ !

Kannada News

06-09-2017

ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದ್ದು, ರಾಜ್ಯದೆಲ್ಲೆಡೆ ಪ್ರತಿಭಟನೆಗಳು ತೀವ್ರಗೊಂಡಿವೆ.

ದುಷ್ಕರ್ಮಿಗಳ ಹತ್ಯೆ ಖಂಡಿಸಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರತಿಭಟನೆಗಳು ತೀವ್ರಸ್ವರೂಪ ಪಡೆದಿದ್ದು, ಪತ್ರಕರ್ತರು, ಚಿಂತಕರು, ವಿಚಾರವಾದಿಗಳು, ಸಾಹಿತಿಗಳು ಹಾಗೂ ಹೋರಾಟಗಾರರು ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ಆಕ್ರೋಶ  ವ್ಯಕ್ತಪಡಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಗತಿಪರರು, ಚಿಂತಕರು, ವಿಚಾರವಾದಿಗಳು ಬೆಂಗಳೂರು ಸೇರಿ ರಾಜ್ಯದ ಮ್ರಮುಖ ನಗರಗಳು ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹತ್ಯೆಯನ್ನು ಬಲವಾಗಿ ಖಂಡಿಸಿರುವ ಪ್ರತಿಭಟಬನಾಕಾರರು ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ವಿಚಾರವಾದಿಗಳನ್ನು ಗುರಿಯಾಗಿಸಿ ನಡೆದಿರುವ ಕೊಲೆಗಳನ್ನು ಖಂಡಿಸಿರುವ ಪ್ರತಿಭಟನಾಕಾರರು, ನಾನೇ ಗೌರಿ, ನಾನೇ ಕಲಬುರಗಿ ಎಂಬ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ತುಮಕೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಗುಲ್ಬರ್ಗ, ಬೀದರ್, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆಗಳು ನಡೆದಿವೆ.

ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕೊಲೆಗಡುಕರನ್ನು ಬಂಧಿಸಿ ಶಿಕ್ಷೆ ಕೊಡಿಸಬೇಕು ಎಂಬ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಆಸ್ಪತ್ರೆ ಬಳಿ ಪ್ರತಿಭಟನೆ: ಪತ್ರಕರ್ತೆ ಗೌರಿ ಲಂಕೇಶ್ ಅವರ ಶವ ಪರೀಕ್ಷೆ ನಡೆದ ವಿಕ್ಟೋರಿಯಾ ಆಸ್ಪತ್ರೆ ಬಳಿಯೂ ಪತ್ರಕರ್ತರು ಹಾಗೂ ವಿಚಾರವಾದಿಗಳು ಧರಣಿ ನಡೆಸಿ ಹತ್ಯೆಯನ್ನು ಖಂಡಿಸಿದರು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಪಾಲ್ಗೊಂಡಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ