ಸಿಎಂ ಯಾರೆಂದು ಮೊದಲೇ ಘೋಷಿಸಲ್ಲ !

Kannada News

27-09-2017

ಬೆಂಗಳೂರು: ವಿಧಾನಸಭಾ ಚುನಾವಣೆಯ ನಂತರವೇ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ನಿರ್ಧಾರವಾಗಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೆ ಮೊದಲೇ ಇದರ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುವ ಪದ್ಧತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲಾಗುವುದು ಎಂಬ ಮಾತುಗಳಿಗೆ ವಿರಾಮ ಹಾಕಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ವಿವಿಧ ನಾಯಕರುಗಳ ಕಾಂಗ್ರೆಸ್ ಸೇರ್ಪಡೆ ನಂತರ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಹಲವರು ಮುಂದಿನ ಮುಖ್ಯಮಂತ್ರಿ ಇವರೇ ಎಂದು ವ್ಯಾಖ್ಯಾನ ಮಾಡಿರಬಹುದು. ಆದರೆ, ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರೆ ಮಾತ್ರ ಆ ಮಾತಿಗೆ ಮೌಲ್ಯವಿರುತ್ತದೆ. ಯಾರ್ಯಾರೋ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡರೆ ಅದಕ್ಕೆಲ್ಲ ಅರ್ಥವಿಲ್ಲ ಎಂದು ಖಂಡತುಂಡವಾಗಿ ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ನೇತೃತ್ವದಲ್ಲೇ ಎದುರಿಸಲಾಗುವುದು. ಪಕ್ಷ ಬಹುಮತ ಪಡೆದ ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ವರಿಷ್ಠರ ಕಳುಹಿಸುವ ವೀಕ್ಷಕರ ಸಮ್ಮುಖದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡುವುದು ಕಾಂಗ್ರೆಸ್‌ ನ ಪದ್ಧತಿ. ಈ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ, ಈ ಚುನಾವಣೆಯಲ್ಲಿ ಈ ಪದ್ಧತಿ ಮುಂದುವರಿಯಲಿದ್ದು, ಚುನಾವಣೆಗೆ ನಂತರವೇ ಸಿ.ಎಂ ಯಾರು ಎಂಬುದು ತೀರ್ಮಾನವಾಗುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಕೆಲ ಜಾಲತಾಣಗಳಲ್ಲಿ ಹಾಗೂ ಕೆಲವರು ಮುಖಂಡರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂದು ಬಿಂಬಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಹೇಳಿದ್ದಲ್ಲ ನಡೆಯುವುದಿಲ್ಲ, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಹೇಳಿದರೇ ಮಾತ್ರ ಅದಕ್ಕೆ ಬೆಲೆ. ಯಾರ್ಯಾರೋ ನಾನೇ ಸಿಎಂ ಇವರೇ ಸಿಎಂ ಎಂದರೆ ಆ ಮಾತುಗಳು ಅರ್ಥವಿಲ್ಲದ್ದು ಎಂದರು.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಆ ರೀತಿಯ ವಾತಾವರಣ ರಾಜ್ಯದಲ್ಲಿದೆ ಎಂದ ಅವರು, ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡದ ಚಿತ್ರ ನಿರ್ಮಾಪಕ ಡಾ. ರಾಜಶೇಖರ ಕೋಟ್ಯಾನ್, ಮಾಜಿ ಶಾಸಕರಾದ ಪಿ.ಎಸ್.ಪ್ರಕಾಶ್, ಪುಟ್ಟಸಿದ್ದಶೆಟ್ಟಿ, ಚಿತ್ರ ನಿರ್ಮಾಪಕ ಶ್ರೀನಿವಾಸಮೂರ್ತಿ ಸೇರಿದಂತೆ ಹಲವರನ್ನು ಡಾ.ಜಿ.ಪರಮೇಶ್ವರ್ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಸಚಿವ ಎಂ.ಆರ್.ಸೀತಾರಾಮ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೊದಲಾದ ಮುಖಂ‌ಡರು ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ