ದಾಳಿ ನಡೆಸಲು ಎಸಿಬಿಗೆ ಅಧಿಕಾರವಿಲ್ಲ..

Kannada News

05-10-2017

ಬೆಂಗಳೂರು: ರಾಜ್ಯದ ಸಚಿವರು ಮತ್ತು ಅಧಿಕಾರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ, ಪ್ರತೀಕಾರವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಐಟಿ, ಎಡಿ ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಲು ಸಿದ್ಧತೆ ನಡೆಸಿರುವುದನ್ನು ತಿಳಿದು ಕೊಂಡಿರುವ ಆದಾಯ ತೆರಿಗೆ ಇಲಾಖೆ ಮುಖ್ಯಸ್ಥ ಬಾಲಕೃಷ್ಣನ್ ಅವರು ರಾಜ್ಯ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಿ ಅಧಿಕಾರಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಬಿ.ಆರ್.ಬಾಲಕೃಷ್ಣನ್ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ.ದತ್ತಾ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪತ್ರದಲ್ಲಿ ಎಸಿಬಿ ಐಟಿ ಅಧಿಕಾರಿಗಳ ಮೇಲೆ ದಾಳಿ ಮಾಡಲು ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.

ಐಟಿ ಆಧಿಕಾರಿಗಳ ಮೇಲೆ ರಾಜ್ಯ ಸರ್ಕಾರ ತನ್ನ ಭ್ರಷ್ಟಾಚಾರ ನಿಗ್ರಹ ದಳದ ಮೂಲಕ ದಾಳಿಗೆ ಯೋಜನೆ ರೂಪಿಸಿರುವ ಕುರಿತು ಕೇಂದ್ರ ಗುಪ್ತಚರ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಬಿ.ಆರ್.ಬಾಲಕೃಷ್ಣನ್ ಪತ್ರದಲ್ಲಿ ಉಲ್ಲೇಖ ಮಾಡಿದ್ದು, ಐಟಿ ಆಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ದೂರುಗಳು ಬಂದಿದ್ದರೆ, ಅವುಗಳ ಕುರಿತು ಕೇಂದ್ರ  ಸರ್ಕಾರಕ್ಕೆ ಅಥವಾ ಐಟಿ ಇಲಾಖೆಯ ನಿರ್ದೇಶಕರಿಗೆ ದೂರು ನೀಡಲಿ. ಅದನ್ನು ಬಿಟ್ಟು ಅಧಿಕಾರಿಗಳ ಮೇಲೆ ದಾಳಿ ಮಾಡುವ ಯಾವುದೇ ರೀತಿಯ ಅಧಿಕಾರ ಎಸಿಬಿಗಾಗಲೀ ಅಥವಾ ರಾಜ್ಯ ಸರ್ಕಾರಕ್ಕೆ ಆಗಲಿ ಇಲ್ಲ ಎಂದು ಬಿ.ಆರ್.ಬಾಲಕೃಷ್ಣನ್ ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಹಿಂದೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಮೇಲೆ ಈ ಹಿಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಇಬ್ಬರು ಮುಖಂಡರ ಮೇಲೆ ಮಾತ್ರವಲ್ಲದೇ ಇವರ ಅನುಯಾಯಿಗಳು ಮತ್ತು ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿಯಾಗಿತ್ತು. ಈ ಪ್ರಕರಣ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಕಳೆದುಹೊದ ತನ್ನ ವರ್ಚಸ್ಸನ್ನು ಐಟಿ ಆಧಿಕಾರಿಗಳ ಮೇಲೆ ದಾಳಿ ಮಾಡುವ ಮೂಲಕ ಮರಳಿ ಪಡೆಯಲು ಯತ್ನಿಸುತ್ತಿದೆ ಎಂದು ಹೇಳಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ