ಭಾರೀ ಮಳೆ ಹುಷಾರ್ !

Kannada News

07-10-2017

ಬೆಂಗಳೂರು: ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಪೂರ್ವ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ, ಪೂರ್ವದಿಂದ ಪಶ್ಚಿಮಕ್ಕೆ ಬೆಂಗಳೂರು ಪ್ರದೇಶದ ಮೇಲೆ ಹಾಯ್ದು ಹೋಗುವಂತೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ, ಇದರಿಂದಾಗಿ ಬೆಂಗಳೂರು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆ ದಾಖಲಾಗುತ್ತಿದೆ.

ರಾಜ್ಯದ ವಿವಿಧೆಡೆ ನಿನ್ನೆ ಭಾರೀ ಮಳೆ ಸುರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ, ಉತ್ತಮ ಮಳೆಯಾಗಿದೆ. ಕೆಲವೆಡೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ.

ಮಂಡ್ಯ, ಹಾಸನದಲ್ಲೂ ಜೋರು ಮಳೆಯಾಗಿದ್ದು, ಮೈಸೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗಿದೆ.

ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಗದಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಯ ಅನೇಕ ಕಡೆ ಧಾರಾಕಾರ ಮಳೆಯಾಗಿದೆ. ಶಿರಸಿ ಮತ್ತು ಸಿದ್ದಾಪುರ ತಾಲ್ಲೂಕಿನ ಒಂದು ತಾಸಿಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಹಾವೇರಿ, ರಾಣೆಬೆನ್ನೂರು, ಹಿರೆಕೆರೂರು, ಅಕ್ಕಿಆಲೂರು ಮತ್ತು ಗದಗಿನ ಮುಂಡರಗಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರಿ ಮಳೆಯಾಗಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ