ಪ್ರತಿಭಟನೆಯಲ್ಲಿ ಮಹಿಳೆಗೆ ಬೆಂಕಿ !

Kannada News

07-10-2017

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಇಂದು ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ಮಹಿಳಾ ಕಾರ್ಯಕರ್ತೆಯೊಬ್ಬರ ಕಾಲಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿವೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಸೌದೆ ಒಲೆಯಲ್ಲಿ ಅಡುಗೆ ಮಾಡುವ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೂರು ದೊಡ್ಡ ಪಾತ್ರೆಗಳನ್ನು ಒಲೆಯ ಮೇಲೆ ಇಟ್ಟು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದಾಗ ಬೆಂಕಿಯ ಕಿಡಿ ಮಹಿಳೆಯ ಕಾಲಿಗೆ ತಗುಲಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ, ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಸುವುದಾಗಿ ಭರವಸೆ ನೀಡಿದ್ದ ಬಿಜೆಪಿ, ಇಂದು ಬೆಲೆ ಇಳಿಸುವ ಬದಲು ಹೆಚ್ಚಳ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಬೆಲೆ ಏರಿಕೆಯಾಗುತ್ತಲೆ ಇದೆ. ಕೇಂದ್ರ ಸರ್ಕಾರ ಬಡವರ ಮತ್ತು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು.

ರಘುವೀರ್ ಎಸ್.ಗೌಡ ಮಾತನಾಡಿ, ನೋಟು ಅಮಾನ್ಯ ನಿರ್ಧಾರದಿಂದ ದೇಶದ ಆರ್ಥಿಕತೆ ಕುಸಿದಿದೆ. ಜಿಎಸ್‍ಟಿ ಜಾರಿಯಿಂದ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ. ಮುಂದಿನ ಚುನಾವಣೆಯಲ್ಲಿ ದೇಶದ ಜನರು ಬಿಜೆಪಿ ಪಕ್ಷಕ್ಕೆ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ