ಮಳೆಯಿಂದ 7 ಸಾವಿರ ಮನೆ ಕುಸಿತ !

Kannada News

14-10-2017

ಈ ವರ್ಷ ರಾಜ್ಯಾದ್ಯಂತ ಸುರಿದ ಮಳೆಯಿಂದಾಗಿ 7 ಸಾವಿರಕ್ಕೂ ಅಧಿಕ ಮನೆಗಳು ಕುಸಿದು ಬಿದ್ದಿದ್ದು, 1200ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ. ರಾಜ್ಯದ ವಿವಿಧೆಡೆ ಸಂಭವಿಸಿರುವ ಅನಾಹುತಗಳು, ಜನ-ಜಾನುವಾರುಗಳ ಸಾವು-ನೋವಿನ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ  ಕಂದಾಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇನ್ನು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಅನಾಹುತ ಮತ್ತು ರಸ್ತೆ ಗುಂಡಿಗೆ ಬಲಿಯಾದ ಘಟನೆಗಳ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

ಮಳೆಯಿಂದ ಉಂಟಾದ ಹಾನಿಗಳು, ಮುಂಜಾಗೃತಾ ಕ್ರಮಗಳ ಬಗ್ಗೆ ವಿವರ ಪಡೆದ ಅವರು, ಮೃತ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು. ಕರ್ನಾಟಕದಲ್ಲಿ ರಸ್ತೆ ಗುಂಡಿಗೆ ನಾಲ್ವರು ಬಲಿಯಾಗಿದ್ದಾರೆ ಎಂಬ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಪಕ್ಷದ ಸಂಸದರು ಕರ್ನಾಟಕ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ ಹಿನ್ನೆಲೆಯಲ್ಲಿ ರಾಹುಲ್ ಈ ವರದಿ ಪಡೆಯಲು ಮುಂದಾಗಿದ್ದಾರೆ.

ಮಳೆ ಹಾನಿ ಮತ್ತು ರಸ್ತೆ ಗುಂಡಿಗೆ ಬಲಿಯಾದ ಘಟನೆ ಬಗ್ಗೆ ರಾಹುಲ್ ಗಾಂಧಿ ವರದಿ ಕೇಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಇದೇ ವಿಷಯಕ್ಕೆ ಸಂಬಂಧಿಸಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕೂಡ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ