ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Kannada News

02-11-2017

ಬೆಂಗಳೂರು: ಬಿಜೆಪಿ ಅಧಿಕಾರಾವಧಿಯಲ್ಲಿ ಬಗರ್ ಹುಕುಂ ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿರುವ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪುರಭವನದ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಬಿಜೆಪಿ ಮುಖಂಡ ಆರ್.ಅಶೋಕ್ ಅವರು 10 ಸಾವಿರ ಕೋಟಿ ರೂ.ಬೆಲೆ ಬಾಳುವ 2402 ಎಕರೆ, 0.27 ಗುಂಟೆ ಜಮೀನನ್ನು ಅಕ್ರಮವಾಗಿ ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮವನ್ನು ಉಲ್ಲಂಘಿಸಿ, ಮಾಜಿ ಕಾರ್ಪೋರೇಟರ್‍ ಗಳು ಮತ್ತು ಅವರ ಕುಟುಂಬದವರಿಗೆ ಬಗರ್ ಹುಕುಂ ಅಡಿ ನೀಡಿದ್ದಾರೆ ಎಂದು ದೂರಿದರು.

ಮಾತ್ರವಲ್ಲ ಆರ್ಥಿಕವಾಗಿ ಸದೃಢವಾಗಿರುವ ವ್ಯಕ್ತಿಗಳಿಗೆ 16 ಗ್ರಾಮಗಳಿಗೆ ಸಂಬಂಧಿಸಿದ 88 ಫಲಾನುಭವಿಗಳಿಗೆ 245 ಎಕರೆ 0.17 ಗುಂಟೆ ಜಮೀನನ್ನು ಬೆಂಗಳೂರು ದಕ್ಷಿಣ ತಾಲ್ಲೂಕಿನ ಅನಧಿಕೃತ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿದರು.

ಅಶೋಕ್ ನಡೆಸಿರುವ ಹಗರಣ ಇತ್ತೀಚಿನ ವರ್ಷಗಳ ಅತಿ ದೊಡ್ಡ ಭೂ ಹಗರಣವಗಿದ್ದು, ಇದು ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ನಡೆಸಿರುವ, ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯವಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಸ್ವ-ಇಚ್ಛೆಯಿಂದ ಕಾನೂನು ಕ್ರಮಕೈಗೊಳ್ಳಬೇಕು. ಮಾತ್ರವಲ್ಲ ಅವರು ಮಂಜೂರು ಮಾಡಿರುವ ಜಮೀನು ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಒತ್ತುವರಿ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು, ಅಶೋಕ್ ಹಾಗೂ ಸಮಿತಿಗೆ ಸಂಬಂಧಿಸಿದ ಸದಸ್ಯರು, ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಈ ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರು ಈ ಬಗ್ಗೆ ದೂರು ನೀಡಲಿದ್ದಾರೆ. ಮಾತ್ರವಲ್ಲ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರು ಈ ಭೂ ಹಗರಣದ ಬಗ್ಗೆ ಧ್ವನಿ ಎತ್ತಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಅವರ ನಿಜಬಣ್ಣವನ್ನು ಜನರ ಮುಂದೆ ಇಡಲಾಗುವುದು. ಚುನಾವಣೆಯಲ್ಲಿ ಜನರು ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಪರಿವರ್ತಿನಾ ಯಾತ್ರೆಯನ್ನು ಟೀಕಿಸಿದ ದಿನೇಶ್ ಗುಂಡೂರಾವ್, ಬಿಜೆಪಿಯ ಯಾರೂ ಪರಿವರ್ತನೆಯಾಗುವುದಿಲ್ಲ. ಬಿ.ಎಸ್.ಯಡಿಯೂರಪ್ಪ, ಮುರುಗೇಶ್ ನೀರಾಣಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮುಂತಾದವರು ಭ್ರಷ್ಟಾಚಾರದಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡಿದ್ದಾರೆ. ಇಂತಹ ನೂರು ಯಾತ್ರೆ ಮಾಡಿದರೂ ಅವರು ಪರಿವರ್ತನೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ವಿ.ಎಸ್.ಉಗ್ರಪ್ಪ, ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ