‘ಪ್ರತಾಪ್ ಸಿಂಹಾಗೆ ರಾಜಕೀಯ ಪ್ರಬುದ್ಧತೆ ಇಲ್ಲ’06-12-2017

ಬೆಂಗಳೂರು: ಕಳೆದ ನಾಲ್ಕೂವರೆ ವರ್ಷಗಳಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದು, ಈ ಬಾರಿ ಇದೇ 13 ರಿಂದ ಒಂದು ತಿಂಗಳ ಕಾಲ ನಿರಂತರ ರಾಜ್ಯ ಪ್ರವಾಸ ಕೈಗೊಂಡಿರುವುದರಲ್ಲಿ ಚುನಾವಣೆ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಕೈಗೊಂಡಿರುವ ಪ್ರವಾಸ ಚುನಾವಣಾ ಗಿಮಿಕ್ ಅಲ್ಲ. ಈ ಬಾರಿ ಒಂದು ತಿಂಗಳ ಕಾಲ ನಿರಂತರ ಪ್ರವಾಸ ಕೈಗೊಂಡಿರುವುದು ವಿಶೇಷವವಾಗಿದೆ ಎಂದರು.

ವಿಧಾನಸೌಧದ ಎದುರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಪುತ್ಹಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಅದಕ್ಕೆ ಧಕ್ಕೆ ತಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಸಂಸದ ಪ್ರತಾಪ್‍ ಸಿಂಹ ಹುಣಸೂರಿನಲ್ಲಿ ಹನುಮ ಜಯಂತಿ ದಿನ ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಯತ್ನಿಸಿದಾಗ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಎಂಬ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡರು. ಹುಣಸೂರಿನ ಘಟನೆಗಳಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರೆ ಹೊಣೆ ಎಂಬ ಪ್ರತಾಪ್‍ಸಿಂಹ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಗೃಹ ಸಚಿವರ ಸಲಹೆಗಾರರ ಪಾತ್ರ ಏನೂ ಇಲ್ಲ ಎಂದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರೊಂದಿಗೆ ಕೆಂಪಯ್ಯ ಅವರು ಮಾತುಕತೆ ನಡೆಸಿದ್ದಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮಾತನಾಡುವುದರಲ್ಲಿ ತಪ್ಪೇನಿದೆ. ಅವರು ಗೃಹ ಸಚಿವರ ಸಲಹೆಗಾರರು. ಗೃಹ ಸಚಿವರ ಸಲಹೆಗಾರರಾಗಿ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡುವುದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದರು. ಸಂಸದ ಪ್ರತಾಪ್‍ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಪ್ರಬುದ್ಧತೆಯನ್ನು ಅವರು ಬೆಳೆಸಿಕೊಳ್ಳಬೇಕು ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ತಮ್ಮ ಸರ್ಕಾರದ ಅವಧಿಯಲ್ಲಿ ಸಾಮಾಜಿಕ ಪ್ರಜಾಪ್ರಭುತ್ವದ ಗುರಿ ಸಾಧಿಸಲಾಗಿದೆ. ಧೀನ ದಲಿತರು ಹಾಗೂ ಸಮಾಜದ ತಳವರ್ಗದ ಅಭಿವೃದ್ಧಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಧೀರ್ಘಕಾಲದ ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ