ಬೂದಿಮುಚ್ಚಿದ ಕೆಂಡದಂತಿರುವ ಹೊನ್ನಾವರ

Honnavar under police protection

15-12-2017

ಕಾರವಾರ: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ ಹೊನ್ನಾವರದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣ ಬಹುತೇಕ ನಿಯಂತ್ರಣದಲ್ಲಿದೆ. ಆದರೂ ಹೆನ್ನಾವರದಲ್ಲಿ ಬೂದಿಮುಚ್ಚಿದ ಕೆಂಡದಂತಿರುವ ಪರಿಸ್ಥಿತಿ ಮೇಲೆ ಪೊಲೀಸರು ತೀವ್ರ ನಿಗಾವಹಿಸಿ ಕಟ್ಟೆಚ್ಚರ ವಹಿಸಿದ್ದಾರೆ. ವಿದ್ಯಾರ್ಥಿನಿಗೆ ಚಾಕುವಿನಿಂದ ಹಲ್ಲೆ ನಡೆಸಿದ ವಿಷಯವು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿದ್ದಂತೆಯೇ ಪಟ್ಟಣ ಹಾಗೂ ತಾಲ್ಲೂಕಿನ ಇತರೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಹಾಗೂ ಇತರೆಡೆಗಳಲ್ಲಿ ಜನರು ಗುಂಪಾಗಿ ಸೇರಿದ್ದು ಕೂಡಲೇ ಹೆಚ್ಚಿನ ಪೊಲೀಸರು ಧಾವಿಸಿ ಬಿಗಿ ಭದ್ರತೆ ಕೈಗೊಂಡರು.

ಪೊಲೀಸರು ಕಟ್ಟೆಚ್ಚರ ವಹಿಸಿದ್ದರಿಂದ ಹೊನ್ನಾವರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದರೂ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪಟ್ಟಣದಲ್ಲಿ ಗುಂಪೊಂದು ಬಲವಂತವಾಗಿ ಅಂಗಡಿ ಮುಚ್ಚಿಸಿ ಬಂದ್ ವಾತಾವರಣ ಸೃಷ್ಟಿಸುತ್ತಿದ್ದ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿದ ಹೆಚ್ಚಿನ ಪೊಲೀಸರು ಗುಂಪು ಚದುರಿಸಿ ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ, ಈ ನಡುವೆ ಹೊನ್ನಾವರದ ಪರೇಶ ಮೇಸ್ತ ಸಾವಿನ ಕುರಿತಾಗಿ ವಾಟ್ಸಾಪ್, ಫೇಸ್‍ ಬುಕ್, ಟ್ವಿಟ್ಟರ್‍ ಗಳಲ್ಲಿ  ಆನ್‍ಲೈನ್ ಸುದ್ದಿ ತಾಣಗಳ ಮೂಲಕ ವದಂತಿಗಳನ್ನು ಹರಡುವವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇದುವರೆಗೂ ಒಟ್ಟು 106 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಆರೋಪಿಗಳ ಪತ್ತಗೆ ಶೋಧ ನಡೆಸಲಾಗಿದೆ ಎಂದು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್‍ಪಂತ್ ತಿಳಿಸಿದ್ದಾರೆ.

ಮಾಗೋಡಿನ 9ನೇ ತರಗತಿಯ ವಿದ್ಯಾರ್ಥಿನಿ ಕಾವ್ಯಾ ಶೇಖರ ನಾಯ್ಕ ಮೇಲೆ ನಡೆದಿರುವ ಹಲ್ಲೆಯ ಕುರಿತು ಪೊಲೀಸರು ಕೂಲಂಕಷ ತನಿಖೆ ಕೈಗೊಳ್ಳಲಾಗಿದ್ದು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದರು. ಇನ್ನೂ ದುಷ್ಕರ್ಮಿಗಳ ಹಲ್ಲೆಯಿಂದ ಗಾಯಗೊಂಡಿರುವ ಮಾಗೋಡಿನ 9ನೇ ತರಗತಿಯ ವಿದ್ಯಾರ್ಥಿನಿ ಕಾವ್ಯಾ ಶೇಖರ ನಾಯ್ಕ ಹೊನ್ನಾವರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ