ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

BJP leader Anand Singh joined Congress party

31-01-2018

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಆನಂದ್ ಸಿಂಗ್ ಇಂದಿಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಇಂದು ಅವರು ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್ ಪಾಟೀಲ್, ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೊದಲಾದವರು ಉಪಸ್ಥಿತರಿದ್ದರು.

ಇನ್ನು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಜಾತ್ಯತೀತ ತತ್ವಗಳಲ್ಲಿ ನಂಬಿಕೆ ಇರುವವರೆಲ್ಲರೂ ಕಾಂಗ್ರೆಸ್ ಪಕ್ಷ ಸೇರಬೇಕು. ಕೋಮುವಾದಿಗಳು ಅಧಿಕಾರದಲ್ಲಿರಬಾರದು ಎಂದು ಹೇಳಿದರು. ಆನಂದ್‍ಸಿಂಗ್ ಅವರು ಕಾಂಗ್ರೆಸ್ ಸೇರುವ ಒಳ್ಳೆಯ ತೀರ್ಮಾನ ಮಾಡಿದ್ದಾರೆ. ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಸಂದರ್ಭದಲ್ಲಿ ಭಾಗಿಯಾಗುವುದಾಗಿ ಅವರು ಹೇಳಿದ್ದ ಸಂದರ್ಭದಲ್ಲಿಯೇ ಅವರ ಜಾತ್ಯತೀತ ಧೋರಣೆ ಅರ್ಥವಾಗಿತ್ತು.

ಜಾತ್ಯತೀತ ಮನೋಭಾವದವರಾರೂ ಬಿಜೆಪಿಯಲ್ಲಿ ಇರಬಾರದು. 2018ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು. ಅದು ಗೆದ್ದರೆ ರಾಜ್ಯದಲ್ಲಿ ಶಾಂತಿ-ನೆಮ್ಮದಿ ಹಾಳಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪರಮೇಶ್ವರ್, ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ, ಆನಂದ್ ಸಿಂಗ್ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯಿಂದಾಗಿ, ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆನಂದ್‍ಸಿಂಗ್, ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಜಾತ್ಯತೀತ ತತ್ವ-ಸಿದ್ಧಾಂತಗಳು ಈ ಪಕ್ಷದಲ್ಲಿವೆ. ಅದೇ ಸಿದ್ಧಾಂತಗಳಲ್ಲಿ ನಂಬಿಕೆಯಿರುವ ನಾನು ಈ ಪಕ್ಷಕ್ಕೆ ಬಂದಿದ್ದೇನೆ. ಬಳ್ಳಾರಿ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಗುರಿ ಹೊಂದಿದ್ದೇವೆ. ಸಿದ್ದರಾಮಯ್ಯನವರು ರಾಜ್ಯ ಕಂಡ ಅತ್ಯಂತ ಖಡಕ್ ಮುಖ್ಯಮಂತ್ರಿ ಎಂದು ಅವರು ಬಣ್ಣಿಸಿದರು.

ಬಳ್ಳಾರಿಯಲ್ಲಿ 10ರಂದು ರಾಹುಲ್‍ಗಾಂಧಿಯವರ ನೇತೃತ್ವದಲ್ಲಿ ಬೃಹತ್ ಎಸ್‍ಟಿ ಸಮಾವೇಶ ನಡೆಯಲಿದೆ. ಅದನ್ನು ಯಶಸ್ವಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಆನಂದ್‍ಸಿಂಗ್ ವಿಭಿನ್ನ ರಾಜಕಾರಣಿ. ಬಳ್ಳಾರಿಯಲ್ಲಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲ ಮಾಡಲಿದ್ದೇವೆ. ರಾಹುಲ್‍ಗಾಂಧಿಯವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ತಿಳಿಸಿದರು. ಹಿರಿಯ ಕಾಂಗ್ರಸ್ ಮುಖಂಡ ಕೆ.ಸಿ.ಕೊಂಡಯ್ಯ ಮಾತನಾಡಿ, ಆನಂದ್‍ಸಿಂಗ್ ಸೇರ್ಪಡೆಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವರ ಮೇಲೆ ಪ್ರಕರಣಗಳಿದ್ದರೆ ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ. ಅದನ್ನು ಅವರು ವೈಯಕ್ತಿಕವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Anand Singh Resignation ಕೆಪಿಸಿಸಿ ಜಾತ್ಯತೀತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ