'ಏಪ್ರಿಲ್ ಕೊನೇ ವಾರದಲ್ಲಿ 2ಪಿಯುಸಿ ಫಲಿತಾಂಶ'20-03-2018

ಬೆಂಗಳೂರು: ಏಪ್ರಿಲ್ ಕೊನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 1 ಸಾವಿರದ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ರಾಜ್ಯದ 4 ಸಾವಿರದ 725 ಕಾಲೇಜುಗಳ 6 ಲಕ್ಷದ 90 ಸಾವಿರದ 150 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಫಲಿತಾಂಶ ಪ್ರಕಟಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ 28 ಸಾವಿರ ಉಪನ್ಯಾಸಕರು 53 ಕೇಂದ್ರಗಳಲ್ಲಿ ಇದೇ 26ರಿಂದ ಮೌಲ್ಯಮಾಪನದಲ್ಲಿ ತೊಡಗಿಕೊಳ್ಳಲಿದ್ದಾರೆ. ಉಪನ್ಯಾಸಕರ ಕೆಲವು ಬೇಡಿಕೆಗಳನ್ನು ಈಡೇರಿಸುವ ಸಂಬಂಧ ನಾಳೆ ಸಭೆ ಕರೆಯಲಾಗಿದೆ. ಮೌಲ್ಯಮಾಪನಕ್ಕೆ ಗೈರು ಹಾಜರಾಗುವವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಶಿಕ್ಷಕರಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರೂಪಾಯಿ ದೊರೆಯಲಿದೆ. ಪ್ರಾಂಶುಪಾಲರಿಗೆ ವೇತನ ಶ್ರೇಣಿ ನಿಗದಿ ಮಾಡಲಾಗಿದೆ ಎಂದು ಸಚಿವ ತನ್ವೀರ್ ಸೇಠ್ ತಿಳಿಸಿದರು.

ಮಾರ್ಚ್ 23ರಿಂದ ಏಪ್ರಿಲ್ 6ವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು.  ಕಳೆದ 2016ರಲ್ಲಿ ನಡೆದ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಸೋರಿಕೆಯಾದ ಬಗ್ಗೆ ತನಿಖೆ ನಡೆದಿದ್ದು, ಸಿಐಡಿಯಿಂದ ಇನ್ನೂ ಅಂತಿಮ ವರದಿ ಬಂದಿಲ್ಲ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Tanveer Sait exams ಪಿಯುಸಿ ಫಲಿತಾಂಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ