ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ!

police department ready for election:Neelamani N Raju

02-04-2018

ಬೆಂಗಳೂರು: ರಾಜ್ಯವಿಧಾನಸಭಾ ಚುನಾವಣೆಯನ್ನು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ.ಎನ್ ರಾಜು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಚುನಾವಣಾ ಆಯುಕ್ತರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

ಕೋರಮಂಗಲದ ಕೆ.ಎಸ್‍.ಆರ್.ಪಿ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಚುನಾವಣಾ ಕಾನೂನು ಹಾಗೂ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚುನಾವಣಾ ಅಕ್ರಮಗಳಿಗೆ ಪೊಲೀಸರೇನಾದರು ನೆರವಾದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.

ಚುನಾವಣಾ ಪ್ರಚಾರ ಸಭೆಗಳಲ್ಲಿ ಆರ್ಕೇಸ್ಟ್ರಾ, ನೃತ್ಯ, ನಂಗಾನಾಚ್ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಎಲ್ಲ ಪೊಲೀಸ್ ಠಾಣೆಗಳಿಗೆ ತಮ್ಮ ವ್ಯಾಪ್ತಿಯಲ್ಲಿ ವಾದ್ಯಗೋಷ್ಠಿಗಳು, ಅಶ್ಲೀಲ ನೃತ್ಯ ನಡೆಸುವುದು ಕಂಡು ಬಂದರೆ ಸಂಘಟಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಪೊಲೀಸರು ಹಗಲಿರುಳು ಶ್ರಮಿಸಲಿದ್ದಾರೆ ಎಂದರು.

ಚುನಾವಣೆಗಳಿರಲಿ, ಹಬ್ಬಹರಿದಿನಗಳಿರಲಿ ಇನ್ಯಾವುದೇ ಜನ ಸಂದಣಿ ಸೇರುವ ಆಚರಣೆಗಳಿರಲಿ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಮನೆ-ಮಠ ಬಿಟ್ಟು ಕಾರ್ಯನಿರ್ವಹಿಸಿದ್ದು, ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದು ಬಣ್ಣಿಸಿದರು. ಸದ್ಯದಲ್ಲೇ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಪೊಲೀಸ್ ಇಲಾಖೆ ಎಲ್ಲ ಸಿದ್ಧತೆ ಕೈಗೊಳ್ಳಲಿದೆ. ಇಲಾಖೆಯಲ್ಲಿ ಬಹಳಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗೃಹ ಇಲಾಖೆ, ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.


ಸಂಬಂಧಿತ ಟ್ಯಾಗ್ಗಳು

nilamani Raju police ಚುನಾವಣೆ ಮನೆ-ಮಠ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ