ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಸಾಲಲ್ಲಿ ಚನ್ನಪಟ್ಟಣ!

H.D.kumaraswamy v/s C.P.yogeshwar v/s H.M Revanna..!

11-04-2018

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಚನ್ನಪಟ್ಟಣ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿ ಪರಿವರ್ತನೆಯಾಗಿದ್ದು, ಜೆಡಿಎಸ್‍ನಿಂದ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಿದರೆ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್‍ನ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿರುವುದಾಗಿ, ಏಪ್ರಿಲ್ 13ರಂದು ಮೊದಲ ಕಂತಿನ ಪಟ್ಟಿ ಬಿಡುಗಡೆಯಾಗಲಿದೆ.

ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಕೆಲ ನಾಯಕರು ದೆಹಲಿಗೆ ದೌಡಾಯಿಸಲಿದ್ದು ಶುಕ್ರವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಆನಂತರ ಕರ್ನಾಟಕದಲ್ಲಿ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವವರ ಮೊದಲ ಕಂತಿನ ಪಟ್ಟಿ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಶಕ್ತಿಶಾಲಿ ಕ್ಯಾಂಡಿಡೇಟ್ ಕಣಕ್ಕಿಳಿಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದು ಇದಕ್ಕೆ ಪೂರಕವಾಗಿ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕ್ಯಾಂಡಿಡೇಟ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರಿಗೆ ಈ ಮುನ್ನ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸೂಚಿಸಲಾಗಿತ್ತಾದರೂ ರೇವಣ್ಣ ಅವರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಮೇಲೆ ತಮಗೆ ಹಿಡಿತವಿಲ್ಲ. ಆದ್ದರಿಂದ ಏಕಾಏಕಿಯಾಗಿ ಸ್ಪರ್ಧಿಸಿ ಮತದಾರರ ಗಮನ ಸೆಳೆಯಲೂ ಸಾಧ್ಯವಿಲ್ಲ. ಆದ್ದರಿಂದ ನಾನು ಈ ಕ್ಷೇತ್ರದಿಂದ ಸ್ಪರ್ಧಿಸಲಾರೆ ಎಂದು ರೇವಣ್ಣ ನಿರಾಕರಿಸಿಬಿಟ್ಟಿದ್ದರು.

ಆದರೆ ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಾರಿಗೆ ಸಚಿವ ರೇವಣ್ಣ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಸಮೀಪದಲ್ಲಿದ್ದು ಮತದಾರರೂ ಅವರಿಗೆ ಸ್ಪಂದಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೈಕಮಾಂಡ್‍ಗೆ ಮನದಟ್ಟು ಮಾಡಿಕೊಟ್ಟರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಮ್ಮ ಗೆಲುವಿಗೆ ಮತದಾರರು ಸಹಕರಿಸಲಿದ್ದಾರೆ ಎಂಬ ನಂಬಿಕೆ ಇದ್ದರೆ, ಸಿ.ಪಿ.ಯೋಗೇಶ್ವರ್ ಅವರಿಗೆ ತಾವು ಮಾಡಿದ ಜನಪರ ಕಾರ್ಯಗಳು ತಮ್ಮ ಕೈ ಹಿಡಿಯಲಿವೆ ಎಂಬ ನಂಬಿಕೆ ಇದೆ. ಈ ಮಧ್ಯೆ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸುವುದು ಖಚಿತವಾದರೆ ಭಾರೀ ಪೈಪೋಟಿಗೆ ಚನ್ನಪಟ್ಟಣ ಸಿದ್ಧವಾಗುವಂತೆ ಮಾಡಿರುವುದು ಸ್ಪಷ್ಟ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ