ಕಾನೂನು ಸುವ್ಯವಸ್ಥೆಗೆ ಕಾಪಾಡಲು ಸಿಎಂ ಆದೇಶ

Commanding to protect law and order by CM

31-05-2018

ಬೆಂಗಳೂರು,ಮೇ.31:ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ಹದ್ದುಬಸ್ತಿನಲ್ಲಿಡಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜಕೀಯ ಒತ್ತಡಗಳಿಗೆ ಮಣಿಯದೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು, ಸರ್ಕಾರದ ಕಡೆಯಿಂದ ಇಲಾಖೆ ಕೆಲಸ ಕಾರ್ಯಗಳಲ್ಲಿ ಯಾವುದೇ ಹಸ್ತಕ್ಷೇಪ ಇರುವುದಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ಆದ್ಯ ಗಮನ ನೀಡಬೇಕು ಎಂದು ಅವರು ಸೂಚಿಸಿದರು.

ಸರ್ಕಾರದ ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಕಾನೂನು ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಜಡ್ಡುಗಟ್ಟಿರುವ ಸರ್ಕಾರಿ ವ್ಯವಸ್ಥೆಯನ್ನು ಸರಿದಾರಿಗೆ ತಂದು ಜನರ ಆಶಯಗಳಿಗೆ ತಕ್ಕಂತೆ ಆಡಳಿತ ವ್ಯವಸ್ಥೆಯನ್ನು ರೂಪಿಸಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಎಚ್ಚರವಹಿಸಿ ಎಂದು ಕಿವಿಮಾತು ಹೇಳಿದರು.

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಅವರ ಹಿತವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ವ್ಯವಸ್ಥೆ ಕಾರ್ಯನಿರ್ವಹಿಸಬೇಕು ಯಾವುದೇ ಮುಲಾಜಿಗೆ ದಾಕ್ಷಿಣ್ಯವಿಲ್ಲದೆ ಕೆಲಸ ಮಾಡಿ ಎಂದು ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ