ಮುಂಗಾರು ಚುರುಕಾದ ಬೆನ್ನಲ್ಲೇ ನೆಲಕಚ್ಚಿದ ಬೆಳೆ

Heavy Rain:crops damaged

09-06-2018

ಬೆಂಗಳೂರು: ರಾಜ್ಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಕರಾವಳಿಯಾದ್ಯಂತ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಮುಂಗಾರಿನ ಅಬ್ಬರಕ್ಕೆ ಕರಾವಳಿ ಜನತೆ ತತ್ತರಿಸಿದ್ದು ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಅಬ್ಬರಕ್ಕೆ ಹೊಳೆ, ನದಿಗಳು ತುಂಬಿ ಹರಿಯುತ್ತಿವೆ. ಉಡುಪಿ ಕರಾವಳಿ ತೀರದಲ್ಲಿ ಮಳೆ ಕಡಿಮೆಯಾಗುತ್ತಿದ್ದಂತೆ ಭೀಕರ ಬಿರುಗಾಳಿ ಬೀಸುತ್ತಿದ್ದು, ಮರಗಳ ಧರಾಶಾಹಿಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಕಡಲ ತಡಿಯ ನಿವಾಸಿಗಳು ಆತಂಕಕ್ಕೆ ಸಿಲುಕಿದ್ದಾರೆ.

ನೆಲಕಚ್ಚಿದ ಬೆಳೆ: ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಹಾಸನ, ಬೇಲೂರು, ಸಕಲೇಶಪುರ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ತರಕಾರಿ ಸೇರಿದಂತೆ ಕೆಲ ಬೆಳೆಗಳು ನೆಲಕಚ್ಚಿದ್ದು, ಮಾವು ಸೇರಿದಂತೆ ಇತರೆ ಮರಗಳು ಧರೆಗುರುಳಿವೆ. ಜಿಟಿ ಜಿಟಿ ಮಳೆಯಿಂದಾಗಿ ರಸ್ತೆ ಬದಿಯ ವ್ಯಾಪಾರಸ್ಥರು ಪರದಾಡುವಂತಾಗಿದೆ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಳೆಗೆ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಶೃಂಗೇರಿ, ಮೂಡಿಗೆರೆ, ಕೊಪ್ಪ, ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಮಳೆಯಿಂದಾಗಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅಡಚಣೆ: ಹಾವೇರಿ ಜಿಲ್ಲಾದ್ಯಂತ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮಳೆಯ ಮಧ್ಯೆಯೇ ಶಾಲಾ, ಕಾಲೇಜು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳತ್ತ ತೆರಳುತ್ತಿದ್ದಾರೆ. ಹಾವೇರಿ ಜಿಲ್ಲೆ ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗಿದ್ದು,ತಂಪು ವಾತಾವರಣ ಸೃಷ್ಟಿಯಾಗಿದೆ. ದಿನದಮಟ್ಟಿಗೆ ರೈತರು ಬಿತ್ತನೆ ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rain Rivers ಗ್ರಾಮೀಣ ಅಡಚಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ