ಜೂ.12 ರಂದು ರಾಜ್ಯಾದ್ಯಂತ ಬಂದ್‍ಗೆ ಕರೆ !

Kannada News

29-05-2017

ಬೆಂಗಳೂರು:- ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡಲೇ ಮಧ್ಯೆಪ್ರವೇಶಿಸಲು ಒತ್ತಾಯಿಸಿ ಜೂ.12 ರಂದು ರಾಜ್ಯಾದ್ಯಂತ ಬಂದ್‍ಗೆ ಕರೆ ನೀಡಿದ್ದೇವೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ , ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕೆ ತರುವಂತೆ ಒಂದು ವರ್ಷದಿಂದ ಉತ್ತರ ಕನ್ನಡ ಭಾಗದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಿಹಾರ ಕಂಡು ಕೊಂಡುಕೊಳ್ಳುವಲ್ಲಿ ವಿಫಲವಾಗಿದೆ. ಹಾಗಾಗಿ ಗೋವಾ, ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಸಮಸ್ಯೆಗಳನ್ಛ್ನು ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಮಧ್ಯೆ ಪ್ರವೇಶಿಸುವಂತೆ ಜೂ.12 ರಂದು ಬಂದ್ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಕಾರ್ಖಾನೆಗಳ ಖಾಸಗೀಕರಣ ವಿರೋಧಿಸಿ ಜೂ.12 ರಂದು ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಬೃಹತ್ ರ್ಯಾಲಿ ನಡೆಸಲಾಗುವುದು ಎಂದು ಹೇಳಿದರು.  ಜೂ.6 ರಂದು ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನಿಂದ ರಾಮನಗರ ಮೂಲಕ ಕನಕಪುರವರೆಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ಅವಿಭಾಜ್ಯ ಅಂಗವಾದ ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡಿಗರ ಮೇಲೆ ಮಲೆಯಾಳಂ ಭಾಷೆ ಜಾರಿಗೆ ತಂದಿದೆ. ಭಾಷಾ ನೀತಿ ವಿರೋಧಿ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿ ಬಂದ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದರು. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಅತಿಯಾಗಿದ್ದು, ಅಲ್ಲಿನ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗಾವಿ ಜಿಲ್ಲೆಯ ಶಾಸಕರು ಏನು ಕೆಲಸ ಮಾಡುತ್ತಿದ್ದಾರೆ? ಕೂಡಲೇ ರಾಜ್ಯ ಸರ್ಕಾರ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್‍ಸೀಡ್ ಮಾಡಬೇಕು ಮತ್ತು ಎಂಇಎಸ್ ಕಾರ್ಯಕರ್ತರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ