ಲೋಕಸಭಾ ಚುನಾವಣೆ: ಮೈತ್ರಿ ಕುರಿತು ಸಿಎಂ ಮಾರ್ಮಿಕ ಹೇಳಿಕೆ

Lok sabha election: CM kumaraswamy reaction on coalition with congress

24-07-2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗಿನ ಮೈತ್ರಿ ಆ ಪಕ್ಷದ ನಾಯಕರ ನಡವಳಿಕೆ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ. ಆದರೆ, ನಮ್ಮ ಪಕ್ಷ ಮಾತ್ರ ಮೈತ್ರಿ ಪರವಾಗಿದೆ. ಎರಡೂ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಬೇಕು ಎನ್ನುವುದು ತಮ್ಮ ಆಪೇಕ್ಷೆಯಾಗಿದೆ ಎಂದು ತಿಳಿಸಿದ್ದಾರೆ

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಅತಂತ್ರ ವಿಧಾನಸಭಾ ಸೃಷ್ಟಿಯಾಗಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿದೆ. ಇದೇ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆವರೆಗೆ ಮುಂದುವರೆಯಬೇಕು ಎಂಬುದು ನನ್ನ ಅಪೇಕ್ಷೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡೇ ಚುನಾವಣೆ ಎದುರಿಸಬೇಕು ಎಂಬುದು ನಮ್ಮ ಪಕ್ಷದ ನಾಯಕರ ನಿಲುವು. ಆದರೆ ಈ ಹೊಂದಾಣಿಕೆ ರಾಜಕಾರಣ ಕಾಂಗ್ರೆಸ್ ಪಕ್ಷದ ನಾಯಕರ ನಡೆ ಮೇಲೆ ಅವಲಂಬಿತವಾಗಿದೆ ಎಂದು ಪುನರ್ ಉಚ್ಛರಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಮಹತ್ವ ಪಡೆದಿದೆ. ಕಾಂಗ್ರೆಸ್ ನಾಯಕರು ಒಪ್ಪಿದ್ದರೆ ಮಾತ್ರ ಚುನಾವಣಾ ಮೈತ್ರಿ ಎಂಬ ಸಂದೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹೇಳಿಕೆ ಮೂಲಕ ಪರೋಕ್ಷ ಸಂದೇಶವನ್ನು ಹೊರ ಹಾಕಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಒಲವೇನು ಇಲ್ಲ. ಮೈತ್ರಿಗೆ ಅವರು ಈಗಾಗಲೇ ತಮ್ಮ ಆಪ್ತರ ಬಳಿ ಅಸಮಾಧನವನ್ನು ಹೊರ ಹಾಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರ ಬಳಿಯೂ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾದರೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಭದ್ರ ನೆಲೆಗೆ ತೊಂದರೆಯಾಗುತ್ತದೆ. ಹಾಗಾಗಿ ಮೈತ್ರಿ ಬಗ್ಗೆ ಆತುರದ ನಿರ್ಧಾರ ಬೇಡ ಎಲ್ಲವನ್ನು ಸಮಗ್ರವಾಗಿ ಅವಲೋಕಿಸಿ ತೀರ್ಮಾನ ಮಾಡಿ ಎಂದು ಅವರು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಪ್ರಾಯಕ್ಕೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರಾದರೂ ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿ ಅಧಿಕಾರ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯನವರ ನಿಲುವು ಅಪಥ್ಯ ಎನಿಸಿದೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಅಧಿಕಾರಸ್ಥ ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗುತ್ತದೆಯೋ ಇಲ್ಲವೋ ಎಂಬ ಕುತೂಹಲಕ್ಕೆ ಕಾರಣವಾಗಿದೆ. ಹಾಗಾಗಿಯೇ ಕುಮಾರಸ್ವಾಮಿ ಅವರು ಇಂದು ಮೈತ್ರಿ ತೀರ್ಮಾನ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಅವಲಂಬಿತವಾಗಿದೆ ಎಂದು ಸೂಚ್ಯವಾಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ವಿಚಾರದಲ್ಲೂ ಎರಡೂ ಪಕ್ಷಗಳಲ್ಲಿ ಸಹಮತ ಮೂಡಿಲ್ಲ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಬಗ್ಗೆಯೂ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವಿದೆ. ಈ ಬಗ್ಗೆ ಕೆಲ ನಾಯಕರು ಬಹಿರಂಗವಾಗಿಯೇ ಹೇಳಿಕೆಯನ್ನು ನೀಡಿದ್ದಾರೆ.

ಮೈತ್ರಿ ಸಂಬಂಧ ಕಾಂಗ್ರೆಸ್ ನಾಯಕರುಗಳ ಹೇಳಿಕೆಗೆಳು ಸಮ್ಮಿಶ್ರ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮೈತ್ರಿ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಬಾರದು ಎಂದು ಈಗಾಗಲೇ ಕಟ್ಟಾಜ್ಞೆ ವಿಧಿಸಿದ್ದಾರೆ.

ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹಾಗಾಗಿ ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರು ಸದ್ಯಕ್ಕೆ ತುಟಿಕ್ ಪಿಟಿಕ್ ಎನ್ನದೆ ಮೌನಕ್ಕೆ ಶರಣಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Lok Sabha congress-jds ಬಹಿರಂಗ ವ್ಯತಿರಿಕ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ