ಎತ್ತರಿಸಿದ ರಸ್ತೆ: ಪರಿಸರ ಪರಿಣಾಮ ಮೌಲ್ಯಮಾಪನಕ್ಕೆ ಸಿಎಂ ಸೂಚನೆ

cm had meeting with DC and other higher officials

30-07-2018

ಬೆಂಗಳೂರು: ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ.ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸಾಲ ಮನ್ನಾ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಮಹತ್ವದ್ದು ಎಂದು ನುಡಿದರು. ಮಧ್ಯವರ್ತಿಗಳು ಈ ಯೋಜನೆಯ ದುರುಪಯೋಗ ಪಡೆಯದಂತೆ ಎಚ್ಚರಿಕೆ ವಹಿಸಿ ಎಂದು ಅವರು ಕಿವಿ ಮಾತು ಹೇಳಿದರು.

ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಿ. ಪ್ರತಿ ತಿಂಗಳು ತಾಲ್ಲೂಕುಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಎಂದು ಸಲಹೆ ಮಾಡಿದರು. ಚುನಾವಣೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿತ್ತು. ಈಗ ಅಧಿಕಾರಿಗಳು ಚುರುಕಾಗಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಒಳ್ಳೆಯ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ ಎಂದು ಅವರು ನುಡಿದರು.

ಮಾಧ್ಯಮಗಳಲ್ಲಿ ಸರ್ಕಾರದ ಕುರಿತು ಪ್ರಕಟಿಸುವ ವರದಿಗಳಿಗಿಂತ ಅಭಿವೃದ್ಧಿಗೆ ಆದ್ಯತೆ ನೀಡಿ. ಈ ಸರ್ಕಾರ 5 ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದು ತಿಳಿಸಿದರು.

ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಸ್ಥಳೀಯ ಕಾರ್ಖಾನೆಗಳಲ್ಲಿ ಉದ್ಯೋಗ ಕೊಡಿಸಲು ಅವಕಾಶ ಕಲ್ಪಿಸಬೇಕು. ಜನ ಸಾಮಾನ್ಯರನ್ನು ನೇರವಾಗಿ ಭೇಟಿ ಮಾಡುವಂತೆ ಸೂಚಿಸಿದರು.

ಸರ್ಕಾರ ನಡೆಸುವ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಮೂಲ ಸೌಕರ್ಯ ಆಹಾರ ಗುಣಮಟ್ಟ ಪರಿಶೀಲಿಸಬೇಕು. ಅದರಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೂ ಭೇಟಿ ನೀಡಿ ಆಯಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರೇಪಿಸಿ ಎಂದು ಸಲಹೆ ನೀಡಿದರು.

ಶಾಲೆ ಕಾಲೇಜುಗಳಿಗೆ ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೊಠಡಿ, ಶೌಚಾಲಯ, ಪ್ರಯೋಗಾಲಯ ಮತ್ತಿತರ ಸೌಲಭ್ಯ ಒದಗಿಸಲು ಉದ್ದೇಶಿಸಿದೆ. ಅದೇ ರೀತಿ 4 ಸಾವಿರಕ್ಕೂ ಹೆಚ್ಚು ಕಿ.ಮೀ. ಹೆದ್ದಾರಿ ಕಾಮಗಾರಿ ಪೂರ್ಣ ಗೊಳಿಸಲು ಅಗತ್ಯ ಭೂಸ್ವಾಧೀನ ಮತ್ತಿತರ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ವಸತಿ ಯೋಜನೆಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸರ್ಕಾರಿ ಜಮೀನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಇನ್ನು ಬೆಂಗಳೂರು ನಗರದಲ್ಲಿ ಒಟ್ಟು 102.04 ಕಿ.ಮೀ ಉದ್ದದ ಎತ್ತರಿಸಿದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಏಕಾಂ, ಡೆಲಾಯಿಟ್ ಹಾಗೂ ಇನ್ಫ್ರಾ ಸಪೋರ್ಟ್ ಸಂಸ್ಥೆಗಳ ಸಹಯೋಗದೊಂದಿಗೆ ಸಿದ್ಧಪಡಿಸಿರುವ ವಿಸ್ತೃತ ಸಂಭವನೀಯ ವರದಿ (ಡೀಟೈಲ್ಡ್ ಪೋಸಿಬಿಲಿಟಿ ರಿಪೋರ್ಟ್)ಯನ್ನು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ಪಡಿಸಲಾಯಿತು.

ಬೆಂಗಳೂರಿನ ವಾಹನ ದಟ್ಟಣೆಯನ್ನು ಕಡಿತಗೊಳಿಸಲು ಸಾರ್ವಜನಿಕ ಸಾರಿಗೆಗೆ ಹೆಚ್ಚು ಒತ್ತು ನೀಡಲಾಗಿದೆ. ಆದರೂ, ಮೆಟ್ರೋ ಯೋಜನೆಯೊಂದೇ ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲಾರದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಿಸಿದರು. ಪ್ರಸ್ತಾಪಿಸಲಾಗಿರುವ ಯೋಜನೆಯ ಕುರಿತಂತೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆಯಲು ಹಾಗೂ ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು .

ಬೆಂಗಳೂರಿನ ವಾಹನ ದಟ್ಟಣೆಯನ್ನು ಸುಗಮಗೊಳಿಸಲು, ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಹಾಗೂ ಇಂಗಾಲ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ  6 ಎತ್ತರಿಸಿದ ರಸ್ತೆಗಳ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ವರೆಗೆ ಸಂಪರ್ಕ ಕಲ್ಪಿಸುವ ಷಟ್ಪಥ ಉತ್ತರ-ದಕ್ಷಿಣ ಕಾರಿಡಾರ್ -1 , ಕೆ.ಆರ್.ಪುರಂನಿಂದ ಗೊರಗುಂಟೆಪಾಳ್ಯದವರೆಗೆ (ರಾಮಮೂರ್ತಿನಗರ ರಿಂಗ್ ರಸ್ತೆಯಿಂದ ಐಟಿಪಿಎಲ್ ಮಾರ್ಗ ಸೇರಿದಂತೆ) ಷಟ್ಪಥ ಪೂರ್ವ-ಪಶ್ಚಿಮ ಕಾರಿಡಾರ್-1 , ವರ್ತೂರು ಕೋಡಿಯಿಂದ ಜ್ಞಾನಭಾರತಿವರೆಗೆ ಪೂರ್ವ-ಪಶ್ಚಿಮ ಕಾರಿಡಾರ್-2 , ಚತುಷ್ಪಥ ರಸ್ತೆಯುಳ್ಳ ಸಂಪರ್ಕ ಕಾರಿಡಾರ್ I , II, III  ರಸ್ತೆ ನಿರ್ಮಿಸಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.

ಸಭೆಯಲ್ಲಿ  ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕರ್ನಾಟಕ  ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಉಪಸ್ಥಿತರಿದ್ದರು.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ