ರಾಜ್ಯದ ಪ್ರತಿಯೊಂದು ಮನೆಗೆ ಶೌಚಾಲಯ: ಕೃಷ್ಣ ಭೈರೇಗೌಡ

Toilet for Every home in the state: Krishna Byregowda

02-08-2018

ಬೆಂಗಳೂರು: ಪ್ರಸಕ್ತ ವರ್ಷದ ಗಾಂಧಿ ಜಯಂತಿ ಒಳಗೆ ರಾಜ್ಯದ ಪ್ರತಿಯೊಂದು ಮನೆಗೆ ಶೌಚಾಲಯ ನಿರ್ಮಾಣ ಮಾಡಲಾಗುವುದು. ಸಮಯಾವಕಾಶದ ಕೊರತೆಯಾದಲ್ಲಿ ಈ ವರ್ಷದ ಅಂತ್ಯದ ವೇಳೆಗೆ ಮನೆಗೊಂದು ಶೌಚಾಲಯ ಒದಗಿಸುವ ಗುರಿಯನ್ನು ಮುಟ್ಟಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

“ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕರ್ನಾಟಕ-2018” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಸ್ವಚ್ಛ ಮೇವ ಜಯತೇ” ಎಂಬ ಘೋಷವಾಕ್ಯದ ಅಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ಕಾರ್ಯಕ್ರಮವನ್ನು ಆಗಸ್ಟ್ 01 ರಿಂದ ಆಗಸ್ಟ್ 31ರವರೆಗೆ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ 680 ಜಿಲ್ಲೆ, 6.980 ಗ್ರಾಮ, 34.900 ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ 50.00 ಲಕ್ಷ ನಾಗರಿಕರ ಸಂದರ್ಶನ ಮತ್ತು ಅಭಿಪ್ರಾಯಗಳನ್ನು ಈ ಸಮೀಕ್ಷೆಯಡಿ ಪಡೆಯಲಾಗುವುದು ಎಂದು ಅವರು ಹೇಳಿದರು. ಈಗಾಗಲೇ ರಾಜ್ಯದ ಗ್ರಾಮಗಳಲ್ಲಿ 39.8 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈ ವರ್ಷದ ಅಂತ್ಯದಲ್ಲಿ 5,53,164 ಬಾಕಿ ಇರುವ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.

ಪ್ರತಿ ಶೌಚಾಲಯಕ್ಕೆ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದ್ದು, ಪ್ರತೀ ಶೌಚಾಲಯಕ್ಕೆ 12.000/- ರೂಗಳನ್ನು ವಿನಿಯೋಗಿಸಲಾಗುತ್ತಿದೆ. ಇತ್ತೀಚಿಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಅಕ್ಟೋಬರ್ 02ರ ಒಳಗೆ ನಿಗದಿತ ಗುರಿ ಮುಟ್ಟಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ನಗರ ಪ್ರದೇಶಗಳ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಅದರಲ್ಲಿಯೂ ವಿಶೇಷವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಈ ಸ್ವಚ್ಛತಾ ಆಂದೋಲನದಲ್ಲಿ ಅರಿವು ಮೂಡಿಸಲಾಗುತ್ತದೆ. ಮಕ್ಕಳಿಗೆ ಇದರ ಬಗ್ಗೆ ಅರಿವು ಮೂಡಿಸಿದರೆ ಅವರು ತಮ್ಮ ಪೋಷಕರು ಮತ್ತು ಇತರರಿಗೆ ಅದರ ಬಗ್ಗೆ ಹೆಚ್ಚು ಆಸ್ಥೆ ವಹಿಸುವಂತೆ ಮಾಡುತ್ತಾರೆ ಎಂಬ ಉದ್ದೇಶದಿಂದ ಈ ಸ್ವಚ್ಛತಾ ಆಂದೋಲನದ ರಾಯಭಾರಿಯಾಗಿ ಮಕ್ಕಳನ್ನು ಆಯ್ದುಕೊಳ್ಳಲಾಗಿದೆ. ಮಕ್ಕಳ ಮೂಲಕವೇ ನಾವು ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಸಾಧ್ಯ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಸಚಿವರು ಬೋಧಿಸಿದರು.


ಸಂಬಂಧಿತ ಟ್ಯಾಗ್ಗಳು

Krishna Byre Gowda swachh survekshan ಸಮೀಕ್ಷೆ ಶೌಚಾಲಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ