ಮಹಾ ಮಳೆ: ಹೆಲಿಕಾಪ್ಟರ್ ಮೂಲಕ ಜನ-ಜಾನುವಾರು ರಕ್ಷಣೆಗೆ ಸೂಚನೆ

Heavy Ravi at madikeri:

16-08-2018

ಮಡಿಕೇರಿ: ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದಾರೆ.

ಮಡಿಕೇರಿ ಜಿಲ್ಲೆಯ ಬದಿಗೆರೆಯಲ್ಲಿ ಪ್ರಾಣ ರಕ್ಷಣೆಗಾಗಿ ಗುಡ್ಡ ಹತ್ತಿರುವ 300ಕ್ಕೂ ಹೆಚ್ಚು ಮಂದಿಯನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬದಿಗೆರೆ ಸಮೀಪದ ಹತ್ತಿಹೊಳೆ ತುಂಬಿದ್ದರಿಂದ ಆತಂಕಗೊಂಡಿರುವ ನೂರಾರು ಮಂದಿ ಊರಿನ ಗುಡ್ಡವನ್ನು ಏರಿ ರಕ್ಷಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಆ ಗುಡ್ಡವೂ ಕುಸಿಯುವ ಲಕ್ಷಣ ಕಂಡುಬಂದಿದೆ. ಈ ಬಗ್ಗೆ ವರದಿ ತರಿಸಿಕೊಂಡಿರುವ ಮುಖ್ಯಮಂತ್ರಿಗಳು ಈ ಕೂಡಲೇ ಅಲ್ಲಿಗೆ ಧಾವಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೊಡಗು ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದೆ. ಕೆರೆ, ನದಿಗಳು ತುಂಬಿ ಆತಂಕದ ಹಂತ ತಲುಪಿದೆ. ಈ ಎಲ್ಲೆಡೆ ಜನ ಹಾಗೂ ಜಾನುವಾರು ರಕ್ಷಣೆಗೆ ಮೊದಲ ಆದ್ಯತೆ ನೀಡಲು ಮುಖ್ಯಮಂತ್ರಿಗಳು ಜಿಲ್ಲಾಡಳಿತದೊಂದಿದೆ ಸತತ ಸಂಪರ್ಕದಲ್ಲಿದ್ದು ಸೂಚನೆ ನೀಡಿದ್ದಾರೆ. ಕೊಡಗು,ದಕ್ಷಿಣ ಕನ್ನಡ ಹಾಗೂ ಉಡುಪಿ ಮೂರೂ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ಕೂಡಲೇ ಜಿಲ್ಲೆಯಾದ್ಯಂತ ಸಂಚರಿಸಿ ನೊಂದವರಿಗೆ ಭರವಸೆ ತುಂಬುವಂತೆ ಹಾಗೂ ಅಗತ್ಯ ಎಲ್ಲಾ ನೆರವಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಅಲ್ಲದೆ ತಾವು ವಾಯುಪಡೆಯ ಅಧಿಕಾರಿಗಳೊಂದಿಗೆ, ಈ ಜಿಲ್ಲೆಗಳಲ್ಲಿ ಜನರ ರಕ್ಷಣೆಗೆ ನೆರವು ನೀಡುವ ಕುರಿತು ಮಾತುಕತೆ ನಡೆಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೊಡಗಿನಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಮೊಕ್ಕಾಂ ಹೂಡಿದ್ದು ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ಕ್ರಮ ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಮಾತನಾಡಿದ್ದು ವಸ್ತುಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ. ಸಾರ್ವಜನಿಕರಿಗೆ ನೆರವು ನೀಡಲು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಹಾಗೂ ಇತರ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಕೂಡಲೇ ಜಿಲ್ಲೆಗಳಿಗೆ ತೆರಳುವಂತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಜಿಲ್ಲೆಗಳಲ್ಲಿಯೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Heavy rain H.D.Kumaraswamy ಉಸ್ತುವಾರಿ ಪರಿಹಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ