‘ಕೊಡಗಿಗೆ ವಿಪತ್ತು ನಿರ್ವಹಣಾ ತಂಡ ಕಳುಹಿಸಲು ಸಿದ್ಧ’

Defence minister nirmala sitharaman visited kodagu flood affected area

24-08-2018

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ನಿರಾಶ್ರಿತರ ಜೀವನ ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರಕಾರ ಬದ್ಧವಾಗಿದ್ದು, ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರದ ವಿಪತ್ತು ನಿರ್ವಹಣಾ ತಂಡ ಕಳುಹಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೊಡಗು ಜಿಲ್ಲೆಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವ ಕುರಿತಂತೆಯೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಲಾಗುವುದು ಎಂದರು.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೊಡಗು ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು. ಅವರು ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ, ಪುನರ್ವಸತಿ ಕೇಂದ್ರದಲ್ಲಿಯೂ ಇರುವ ನಿರಾಶ್ರಿತರೊಂದಿಗೆ ಚರ್ಚೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೇನಾ ಸಿಬ್ಬಂದಿಯ ಕಾರ್ಯವೈಖರಿಯನ್ನು ಪರಾಮರ್ಶಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾಗಿರುವ ರಸ್ತೆಗಳು, ಕಟ್ಟಡಗಳು, ವಸತಿ ಗೃಹಗಳು, ವಿದ್ಯುತ್ ಮಾರ್ಗಗಳು ಮತ್ತು ನೀರು ಪೂರೈಕೆ ವ್ಯವಸ್ಥೆಯನ್ನು ಪುನರ್ ನಿರ್ಮಿಸಲು ಭೂಸೇನೆ ಮತ್ತು ವಾಯುಪಡೆಗಳು ಕೈಜೋಡಿಸಿವೆ ಎಂದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಹೆದ್ದಾರಿ ಮರು ನಿರ್ಮಾಣ ಕುರಿತಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ಮಾಡಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಶೀಘ್ರದಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಆಗಮಿಸಿ ಅಧ್ಯಯನ ನಡೆಸಿ ವರದಿ ನೀಡಿದ ಬಳಿಕ ಜಿಲ್ಲೆಗೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡ ಕಳುಹಿಸಿಕೊಡುವಂತೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಈ ತಂಡವು ವಿವಿಧ ಭಾಗಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಿದ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದರು.

ಸಂಸದರ ನಿಧಿಯಿಂದ ಒಂದು ಕೋಟಿ ಹಾಗೂ ರಕ್ಷಣಾ ತಂಡಕ್ಕೆ 7 ಕೋಟಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು. ಕೇರಳಕ್ಕೆ ನೀಡಿರುವ ಪರಿಹಾರದ ಭಾಗದಲ್ಲಿ ಒಂದು ಭಾಗವನ್ನು ಮಾತ್ರ ಕರ್ನಾಟಕಕ್ಕೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದರು. ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್, ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಮತ್ತಿತರರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ನೆರವು ನೀಡಲು ಖುದ್ದು ನಾನೇ ಮನವಿ ಮಾಡಿಕೊಳ್ಳುವೆ. ಜಿಲ್ಲೆಗೆ ಆಗಿರುವ ನಷ್ಟವನ್ನು ಭರಿಸಲು ನಾವು ಸಿದ್ದ ಎಂದು ಹೇಳಿದರು.

ಅನೇಕ ಕಡೆ ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಪರಿಣಾಮ ಜನರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಭೂ ಹೆದ್ದಾರಿ ಸಚಿವರಾದ ಗಡ್ಕರಿ ಅವರನ್ನು ಭೇಟಿ ಮಾಡಿ ರಸ್ತೆಗಳನ್ನು ರಿಪೇರಿ ಮಾಡಲು ಅನುದಾನ ನೀಡುವಂತೆ ಕೋರಲಿದ್ದೇನೆ ಎಂದರು.

ಜಿಲ್ಲೆಯ ವಾಸ್ತವ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಇಂತಹ ಸಂದರ್ಭದಲ್ಲೂ ಕೆಲವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನರನ್ನು ರಕ್ಷಣೆ ಮಾಡಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.  ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಕೆ.ಜೆ.ಬೋಪಯ್ಯ, ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎನ್‍ಆಡಿಆರ್ಎಫ್ ಮುಖ್ಯಸ್ಥರು ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ