ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್!

Denotification case: big Relief to cm kumaraswamy

27-08-2018

ಬೆಂಗಳೂರು: ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತನಿಖೆಯಿಂದ ಕೈಬಿಡಲಾಗಿದ್ದು, ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಿಂದ ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಅವರು, ಕುಮಾರಸ್ವಾಮಿ ಸೇರಿ ಮೂವರನ್ನು ತನಿಖೆಯಿಂದ ಕೈ ಬಿಟ್ಟು ಆದೇಶ ನೀಡಿದ್ದಾರೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶ್ರೀರಾಮ್, ಜ್ಯೋತಿರಾಮಲಿಂಗಂ ಅವರನ್ನು ಮುಕ್ತಗೊಳಿಸಿದೆ. ಮತ್ತೊಬ್ಬ ಆರೋಪಿಯಾಗಿದ್ದ ಚನ್ನಿಗಪ್ಪ ಯಾವುದೇ ಅರ್ಜಿ ಸಲ್ಲಿಸದ ಕಾರಣ ಅವರ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಅರ್ಕಾವತಿ ಲೇಔಟ್ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ನ್ಯಾಯಾಲಯದ ತೀರ್ಪು ವ್ಯತಿರಿಕ್ತವಾಗಿದ್ದರೆ ಕುಮಾರಸ್ವಾಮಿ ಅವರಿಗೆ ಕಂಟಕವಾಗುವ ಸಾಧ್ಯತೆ ಇತ್ತು. ಈಗ ಅವರನ್ನು ಆರೋಪ ಮುಕ್ತಗೊಳಿಸಿರುವುದು ನಿರಾಳವಾದಂತಾಗಿದೆ.

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅರ್ಕಾವತಿಯಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆರೋಪಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಪ್ರತಿಪಕ್ಷ ಬಿಜೆಪಿಯೂ ಕೂಡ ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಕುಮಾರಸ್ವಾಮಿಯವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ನಾಲ್ಕು ವರ್ಷಗಳ ನಂತರ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ. ಇದು ರಾಜಕೀಯ ಪ್ರೇರಿತವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಯಾವುದೇ ಜನಪ್ರತಿನಿಧಿಗಳು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವಾಗ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಆದರೆ ಈ ಯಾವುದೇ ನಿಯಮಗಳನ್ನು ಪಾಲಿಸದೆ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಹಾಗಾಗಿ ಈ ಪ್ರಕರಣ ವಿಚಾರಣೆಗೆ ಪೂರಕವಾಗಿಲ್ಲ ಎಂದು ಅಭಿಪ್ರಾಯಪಟ್ಟಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಅವರು ಈ ನಾಲ್ವರನ್ನು ಖುಲಾಸೆಗೊಳಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ