ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿದೆ: ಸಿಎಂ

H.D.Kumaraswamy reaction on state

05-09-2018

ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳಿಗೆ ಹಣಕಾಸಿನ ಕೊರತೆಯಿಲ್ಲ. ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿದ್ದು, ಪ್ರತಿಪಕ್ಷಗಳ ಆರೋಪಗಳಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಕಾಲೇಜುಗಳ ಅಧ್ಯಾಪಕರ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಬೊಕ್ಕಸದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣವಿದೆ. ಆದಾಯ ಸಂಗ್ರಹ ಶೇ.33ರಷ್ಟು ಏರಿಕೆಯಾಗಿದ್ದು, ಸೋರಿಕೆ ತಡೆಗಟ್ಟಿ ಆದಾಯ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ. ಸರ್ಕಾರದ ಹಣವನ್ನು ಸಾಲ ಮನ್ನಾಗೆ ಬಳಕೆ ಮಾಡಿಕೊಂಡಿಲ್ಲ. ಕೃಷಿ ಸಾಲ ಮನ್ನಾದಿಂದ ಸರ್ಕಾರಿ ಕಾರ್ಯಕ್ರಮಗಳಿಗೆ ಹಣದ ಕೊರತೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರಿ ಶಾಲಾ ಕಾಲೇಜುಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೈಪೋಟಿ ನೀಡುವಂತಾಗಲು ಶಿಕ್ಷಕರ ನೇಮಕಾತಿ, ಕಟ್ಟಡ ನಿರ್ಮಾಣ ಸೇರಿ ಎಲ್ಲಾ ಮೂಲ ಸೌಕರ್ಯ ಒದಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನು ಶಿಕ್ಷಕ ಸಮುದಾಯ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಸರ್ಕಾರಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣ, ನವೀಕರಣ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಒಂದು ಸಾವಿರ ಕೋಟಿ ರೂ ಅನುದಾನ ತೆಗೆದಿರಿಸಲಾಗಿದೆ. ತಕ್ಷಣದಲ್ಲೇ ಕಾಮಗಾರಿಗಳು ಆರಂಭವಾಗಲಿವೆ. ಸರ್ಕಾರಿ ವಿಶ್ವ ವಿದ್ಯಾಲಯಗಳನ್ನು ಅಂತರ ರಾಷ್ಟ್ರೀಯ ದರ್ಜೆಗೆ ಏರಿಸುವ ನಿಟ್ಟಿನಲ್ಲಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ವಿವಿ ಉಪಕುಲಪತಿಗಳಿಗೆ ಸೂಚಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Economy ನೀಲ ನಕ್ಷೆ ಉಪ-ಕುಲಪತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ