ನಾಳೆಯಿಂದ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

07-09-2018
ಬೆಂಗಳೂರು: ನಾಳೆಯಿಂದ ಎರಡು ದಿನ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಸೆಪ್ಟೆಂಬರ್ 8 ಮತ್ತ 9ರಂದು ಎರಡು ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ಎಲ್ಲಾ ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು ಅದರಂತೆ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ, ಪಕ್ಷದ ಬಲ, ಸಂಘಟನೆ, ವರ್ಚಸ್ಸು, ರಾಜ್ಯ ಪ್ರವಾಸ ಹಾಗು ಪಕ್ಷದ ಚಟುವಟಿಕೆಯ ಸಮಗ್ರ ಮಾಹಿತಿಯ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗೆ ನೀಡಲಿದ್ದಾರೆ.
ಡಿಸೆಂಬರ್ ವೇಳೆಗೆ ರಾಜಸ್ತಾನ, ತೆಲಂಗಾಣ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು 2019ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಮುನ್ನ ನಡೆಯುವ ಚುನಾವಣೆ ಇದಾಗಿದೆ. ಈ ಚುನಾವಣಾ ಫಲಿತಾಂಶ ಲೋಕಸಭೆ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದಿಂದಾಗಿ ಆಗಸ್ಟ್ 18-19 ರಂದು ನಡೆಯಬೇಕಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿತ್ತು. ಅದರಂತೆ ಸೆಪ್ಟೆಂಬರ್ಬ 8-9 ರಂದು ನಿಗದಿಪಡಿಸಲಾಗಿದೆ. ಕಳೆದ ವರ್ಷದ ಸೆಪ್ಟೆಂಬರ್ ನಂತರ ನಡೆಯುತ್ತಿರುವ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ.
ಒಂದು ಕಮೆಂಟನ್ನು ಹಾಕಿ