ವೈದ್ಯರ ಮುಷ್ಕರದಿಂದ ಪರದಾಡಿದ ರೋಗಿಗಳು

Doctors Strike

17-06-2019

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಹಾಗೂ ವೈದ್ಯರಿಗೆ ಭದ್ರತೆ ಬೇಕು ಎಂಬ ಬೇಡಿಕೆ ಮುಂದಿಟ್ಟು ರಾಷ್ಟ್ರಾದ್ಯಂತ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಕೆಲವು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಾಗಿತ್ತು.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿರುವ ಕರೆಯನ್ನು ಬೆಂಬಲಿಸಿ ವೈದ್ಯರು ಸೇವೆಯನ್ನು ಸ್ಥಗಿತಗೊಳಿಸಿದ್ದರ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳು ಸೂಕ್ತ ಚಿಕಿತ್ಸೆ ದೊರೆಯದೆ ವೈದ್ಯರಿಗೆ ಹಿಡಿಶಾಪ ಹಾಕಿದರು.

ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು, ಬಾಗಲಕೋಟೆ, ದಾವಣಗೆರೆ, ವಿಜಯಪುರ, ಗುಲ್ಬರ್ಗ, ಬಳ್ಳಾರಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿನ ಖಾಸಗಿ ಆಸ್ಪತ್ರೆಗಳ ವೈದ್ಯರು ಹೊರರೋಗಿಗಳ ವಿಭಾಗವನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳ ವೈದ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಯನ್ನು ನಡೆಸಿದ್ದು ಪಶ್ಚಿಮ ಬಂಗಾಳದಲ್ಲಿ ವೈದ್ಯರೊಬ್ಬರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹ ಪಡಿಸಿದ್ದಾರೆ.

ಈ ಮಧ್ಯೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗವನ್ನು ಏಕಾಏಕಿ ಬಂದ್ ಮಾಡಿರುವುದರ ಪರಿಣಾಮ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಬೇಕಾಯಿತು. ಈ ಹಂತದಲ್ಲಿ ಯಾವುದೇ ಮಾಹಿತಿ ನೀಡದೆ ಏಕಾಏಕಿ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿರುವುದರ ವಿರುದ್ಧ ರೋಗಿಗಳು ಸಿಬ್ಬಂದಿಗಳೊಂದಿಗೆ ಜಗಳಕ್ಕಿಳಿದ ಘಟನೆಯು ನಡೆದಿದೆ.

ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿಗಳು ವಿಭಾಗದಲ್ಲಿ ವೈದ್ಯರ ಕೊರತೆಯು ಕಂಡುಬಂತು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಎಂದಿನಂತೆ ಸಿಗಲಿದೆ ಎಂದು ಸರ್ಕಾರ ಹೇಳಿದ್ದರೂ ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಿದ್ದರಿಂದ  ರೋಗಿಗಳು ತೊಂದರೆಗೆ ಒಳಗಾದರು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಇಂದು ಕಾರ್ಯ ನಿರ್ವಹಿಸಿದ ವೈದ್ಯರು ಕಪ್ಪು ಬ್ರಾಡ್ಜ್ ಧರಿಸಿ ಮುಷ್ಕರಕ್ಕೆ ಬೆಂಬಲ ನೀಡಿದರು.

ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಯಾವುದೇ ಮುಷ್ಕರದಲ್ಲಿ ಪಾಲ್ಗೊಳ್ಳಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಸರ್ಕಾರಿ ಆಸ್ಪತ್ರೆಗಳ ವೈದ್ಯರು ಕೆಲವೆಡೆ ಕಪ್ಪುಪಟ್ಟಿ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿದರು.

ಭಾರತೀಯ ವೈದ್ಯಕೀಯ ಸಂಸ್ಥೆ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಗೆ ವೈದ್ಯರು ಸ್ಪಂದಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರಿಂದ ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ಸಿಗದೆ ಆಸ್ಪತ್ರೆಗಳಿಂದ ನಿರಾಶರಾಗಿ ವಾಪಸ್ಸಾಗಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಹೊರ ರೋಗಿಗಳ ವಿಭಾಗ (ಓಪಿಡಿ) ವನ್ನು ಮುಚ್ಚಿರುವುದರಿಂದ ಚಿಕಿತ್ಸೆ ಪಡೆಯಲು ಬಂದ ರೋಗಿಗಳು ತೊಂದರೆ ಅನುಭವಿಸಬೇಕಾಯಿತು. ಕೆಲ ಆಸ್ಪತ್ರೆಗಳಲ್ಲಿನ ಸಿಬ್ಬಂದಿಗಳು ಮತ್ತು ರೋಗಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

OPD Strike Doctors Patients


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ