ವಿಧಾನಸಭಾಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

Vishweshar Hegde Kageri

30-07-2019

ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಸಭಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಗೆ ಪೂರಕವಾಗಿ ಮಂಗಳವಾರ ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಕೆಯಾಗಬೇಕಿತ್ತಾದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪರವಾಗಿ ಯಾರೂ ನಾಮಪತ್ರ ಸಲ್ಲಿಕೆ ಮಾಡದ್ದರಿಂದ ಸಕಾಲಕ್ಕೆ ನಾಮಪತ್ರ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದನ್ನು ಬುಧವಾರ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು.

ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಲ್ಲಿ ಸಭಾಧ್ಯಕ್ಷರಾಗಿದ್ದ ರಮೇಶ್ ಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರು ತಮ್ಮ ಸರ್ಕಾರಕ್ಕಿದ್ದ ಬಹುಮತವನ್ನು ಸಾಬೀತುಪಡಿಸಿದ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸೋಮವಾರ ಮಧ್ಯಾಹ್ನ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತಲ್ಲದೆ ನೂತನ ಸಭಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧರಿಸಲಾಯಿತು.

ತದ ನಂತರ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಪೂರಕವಾಗಿ  ಈ ಸ್ಥಾನಕ್ಕೆ ಸ್ಪರ್ಧಿಸುವವರು ಮಂಗಳವಾರ ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬೇಕು ಎಂದು ಸೂಚಿಸಲಾಗಿತ್ತು.

ಈ ಮಧ್ಯೆ ಸೋಮವಾರ ರಾತ್ರಿಯ ವೇಳೆಗೆ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರನ್ನೇ ನೂತನ ಸಭಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ಸಿಎಂ ಯಡಿಯೂರಪ್ಪ ಒಲವು ತೋರಿದ್ದರು.

ಅದರನುಸಾರ ಮಂಗಳವಾರ ಮಧ್ಯಾಹ್ನದೊಳಗೆ ನಾಮಪತ್ರ ಸಲ್ಲಿಕೆ ಮಾಡಲು ಕೆ.ಜಿ.ಬೋಪಯ್ಯ ಅವರ ಹೆಸರಿನಲ್ಲಿ ನಾಮಪತ್ರವನ್ನೂ ಸಿದ್ಧಗೊಳಿಸಲಾಗಿತ್ತು. ಆದರೆ ತಮಗೆ ಸಭಾಧ್ಯಕ್ಷ ಸ್ಥಾನ ಬೇಡ.ಬದಲಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕೆ.ಜಿ.ಬೋಪಯ್ಯ ಅವರು ವರಿಷ್ಟರಿಗೆ ಅಹವಾಲು ಸಲ್ಲಿಸಿದ ಮೇಲೆ ಸಭಾಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ತರಲು ಪಕ್ಷ ನಿರ್ಧರಿಸಿತು.

ಇದರನುಸಾರ ನೂತನ ಸಭಾಧ್ಯಕ್ಷ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ತರಲು ನಿರ್ಧರಿಸಲಾಯಿತು ಎಂದು ಬಿಜೆಪಿಯ ಉನ್ನತ ಮೂಲಗಳು ಹೇಳಿವೆ.

1994 ರಿಂದ ನಿರಂತರವಾಗಿ ವಿಧಾನಸಭೆಗೆ ಆಯ್ಕೆಯಾಗಿ ಬರುತ್ತಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಇದುವರೆಗೆ ಒಟ್ಟು ಆರು ಬಾರಿ ಶಾಸನ ಸಭೆಯ ಸದಸ್ಯರಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದ ಕಾಲದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದ ವಿಶ್ವೇಶರ ಹೆಗಡೆ ಕಾಗೇರಿ ಇದೀಗ ಸಭಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು ಸಂಪ್ರದಾಯದಂತೆ ಬುಧವಾರ ಅವರ ಆಯ್ಕೆ ಅಧಿಕೃತವಾಗಿ ಪ್ರಕಟವಾಗಲಿದೆ.

ಈ ಮಧ್ಯೆ ಇಂದು ನಾಮಪತ್ರ ಸಲ್ಲಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ತಮ್ಮ ಮೇಲೆ ನಂಬಿಕೆ ಇಟ್ಟು ವರಿಷ್ಟರು ಸಭಾಧ್ಯಕ್ಷ ಸ್ಥಾನಕ್ಕೆ ತರಲು ಬಯಸಿದ್ದಾರೆ. ಅವರ ನಿರೀಕ್ಷೆಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಎಂದರು.

ಸಿಎಂ ಯಡಿಯೂರಪ್ಪ ಮಾತನಾಡಿ, ಹಲ ಬಾರಿ ಶಾಸನ ಸಭೆಗೆ ಆಯ್ಕೆಯಾಗಿ ಬಂದಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಭಾಧ್ಯಕ್ಷ ಸ್ಥಾನಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ನಾಯಕ,ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಸಂಘಪರಿವಾರದ ಹಿನ್ನೆಲೆಯಿಂದ ಬಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮಗೆ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದಾರೆ ಎಂದು ಅಭಿಪ್ರಾಯಿಸಿದರು.


ಸಂಬಂಧಿತ ಟ್ಯಾಗ್ಗಳು

Vishweshar Hegde Kageri Assembly Speaker BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ