ದಿಲ್ಲಿ ದರ್ಬಾರ್ ನಲ್ಲಿ ಯಡಿಯೂರಪ್ಪ

BS Yediyurappa

06-08-2019

ಬೆಂಗಳೂರು: ಪ್ರತಿಪಕ್ಷಗಳ ಟೀಕೆ ಹಾಗೂ ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡದಿಂದ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ಆಗಮಿಸಿದ್ದಾರೆ.

ಎರಡು ದಿನ ಇಲ್ಲಿಯೇ ವಾಸ್ತವ್ಯ ಹೂಡಲಿರುವ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕಾರ್ಯಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುವರು.

ಮಹದಾಯಿ ನದಿನೀರು ಯೋಜನೆ, ಮೇಕೆದಾಟು, ಕುಡಿಯುವ ನೀರು ಯೋಜನೆ, ಕಾವೇರಿ ಜಲವಿವಾದ ಇತ್ಯರ್ಥ, ರೈಲ್ವೆ, ಇಂಧನ, ರಕ್ಷಣೆ, ನೀರಾವರಿ, ಕಲಿದ್ದಲು ಸೇರಿದಂತೆ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಲು ನೆರವು ನೀಡುವಂತೆ ಮನವಿ ಮಾಡಲಿದ್ದಾರೆ.

ಇದರ ಜೊತೆಗೆ ಪ್ರಮುಖವಾಗಿ ಕೇಂದ್ರ ವರಿಷ್ಠರಿಂದ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ವಾರ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಸುಗಮವಾಗಿ ನಡೆಯಲು ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆಯೂ ಮನವಿ ಮಾಡುವರು.

ಸಂಪುಟ ವಿಸ್ತರಣೆ ಮಾಡುವ ಅಗತ್ಯತೆಯನ್ನು ವರಿಷ್ಠರಿಗೆ ಮನವರಿಕೆ ಮಾಡಿಕೊಡಲಿದ್ದು, ಮೊದಲ ಹಂತದಲ್ಲಿ ಯಾರ್ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು, ಎಷ್ಟು ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

BS Yediyurappa Delhi BJP Amitha Shah


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ